ಪುತ್ತೂರು: ಕರ್ನಾಟಕದಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಲಾಕ್ಡೌನ್ನ ನಂತರ ಜನರು ಸಹಜ ಸ್ಥಿತಿಗೆ ಮರಳಲು ಹಿಂದೇಟು ಹಾಕುತ್ತಿದ್ದಾರೆ. ಸರಕಾರವು ಕೂಡಾ ಜನರಿಗೆ ಸ್ಪಷ್ಟ ನಿರ್ದೇಶನವನ್ನು ನೀಡುತ್ತಿಲ್ಲ. ಇನ್ನೊಂದೆಡೆ ಜನರು ದೈಹಿಕ ಅಂತರವನ್ನು ಕಾಪಾಡಿಕೊಳ್ಳಲು ವಿಫಲವಾಗುತ್ತಿದ್ದಾರೆ. ಈ ಮಧ್ಯೆ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ವಿಚಾರದಲ್ಲಿ ಗೊಂದಲದಲ್ಲಿದ್ದಾರೆ. ಅಲ್ಲದೇ ಈ ಕೋವಿಡ್ ಮಧ್ಯೆ ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕದಲ್ಲಿದ್ದಾರೆ.
ಇಂತಹಾ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಜೂನ್ 25 ರಿಂದ ಜುಲೈ 4 ರವರೆಗೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದನ್ನು ಸರಕಾರ ಮರು ಪರಿಶೀಲಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಕಾಪಾಡುವ ನಿಟ್ಟಿನಲ್ಲಿ ನಿಗದಿಯಾಗಿರುವ ಪರೀಕ್ಷೆಯನ್ನು ಶೀಘ್ರ ಮುಂದೂಡಿಸಿ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿಯ ವತಿಯಿಂದ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿ ಸದಸ್ಯರಾದ ಸವಾದ್ ಕಲ್ಲರ್ಪೆ, ಪುತ್ತೂರು ಜಿಲ್ಲಾಧ್ಯಕ್ಷರಾದ ರಿಯಾಝ್ ಅಂಕತಡ್ಕ, ಉಪಾಧ್ಯಕ್ಷರಾದ ಅಫ್ರೀದ್ ಕೂರ್ನಡ್ಕ, ಜೊತೆ ಕಾರ್ಯದರ್ಶಿ ಶಮ್ಮಾಸ್ ಬನ್ನೂರು,ಸದಸ್ಯರಾದ ಸಬೀರ್ ಕಲ್ಲರ್ಪೆ ಹಾಗೂ ಎಸ್ಎಸ್ಎಲ್ಸಿ ವಿದ್ಯಾರ್ಥಿ, ಜೂನಿಯರ್ ಹೈಸ್ಕೂಲ್ ಯುನಿಟ್ ಅಧ್ಯಕ್ಷರಾದ ರಫೀಕ್ ಕೆಮ್ಮಾಯಿ ಉಪಸ್ಥಿತರಿದ್ದರು.