ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರ ವಿರುದ್ಧ ಬಿಜೆಪಿ ಸದಸ್ಯರು ಕೈಗೊಂಡಿದ್ದ ಅವಿಶ್ವಾಸ ನಿರ್ಣಯಕ್ಕೆ ಹೈಕೋರ್ಟ್ ತಡೆ ನೀಡಿದೆ. ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ ಬಹುಮತದಿಂದ ಆಡಳಿತದ ಚುಕ್ಕಾಣಿ ಹಿಡಿದಿತ್ತು. ಪ್ರಥಮ ಅವಧಿಗೆ ಬಿಜೆಪಿಯ ಅರುಣ್ ಎಂ ವಿಟ್ಲ ಅಧ್ಯಕ್ಷರಾಗಿದ್ದರು. ದ್ವಿತೀಯ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಎಸ್ ಸಿ ಮೀಸಲಾತಿ ಬಂದಿದ್ದು, ಬಿಜೆಪಿಯಲ್ಲಿ ಎಸ್ ಸಿ ವಿಭಾಗದ ಸದಸ್ಯರು ಇರಲಿಲ್ಲ. ಕಾಂಗ್ರೆಸ್ ನಲ್ಲಿ ಎಸ್ ಸಿ ಸದಸ್ಯೆ ಇರುವುದರಿಂದ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದ್ದು, ದಮಯಂತಿ ರವರು ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು.
ಇನ್ನೂ ಚುನಾವಣೆಗೆ ಆರು ತಿಂಗಳು ಬಾಕಿ ಇರುವಾಗಲೇ ಬಿಜೆಪಿಯ 12 ಸದಸ್ಯರು ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಂಡು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಗಳನ್ನು ನಡೆಸಿರುವ ಹಿನ್ನೆಲೆಯಲ್ಲಿ ದಮಯಂತಿ ರವರು ಬೆಂಗಳೂರು ಹೈಕೋರ್ಡ್ ಮೊರೆ ಹೋಗಿದ್ದು, ನ್ಯಾಯಾಲಯ ಅವಿಶ್ವಾಸ ನಿರ್ಣಯಕ್ಕೆ ತಡೆಯಾಜ್ಞೆ ನೀಡಿದೆ.