ಪುತ್ತೂರು: ಪ್ರಸ್ತುತ ವಿದ್ಯಾಮಾನದಲ್ಲಿ ಸಮಾಜದಲ್ಲಾಗುವ ಅಪಾಯಗಳಿಂದ ತಮ್ಮ ಮಕ್ಕಳನ್ನು ರಕ್ಷಿಸುವ ಪಂಥಾಹ್ವಾನ ಹೆತ್ತವರ ಮೇಲಿದೆ. ವಿದ್ಯಾರ್ಥಿಗಳ ಸುಂದರ ಭವಿಷ್ಯವನ್ನು ನಿರ್ಮಾಣ ಮಾಡುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ|ಲಾರೆನ್ಸ್ ಮಸ್ಕರೇನ್ಹಸ್ರವರು ಹೇಳಿದರು.
ಸಂತ ಫಿಲೋಮಿನಾ ಕಾಲೇಜಿನ ಸಿಲ್ವರ್ ಜ್ಯುಬಿಲಿ ಸಭಾಂಗಣದಲ್ಲಿ ಫೆ.೨೦ ರಂದು ನಡೆದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಉದ್ಘಾಟನೆ ಹಾಗೂ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ, ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಕೊರೋನಾ ಈ ಕಾಲಘಟ್ಟದಲ್ಲಿ ಮಾನವನು ಯಾವ ರೀತಿ ಜೀವಿಸಬೇಕೆನ್ನುವ, ಅನಗತ್ಯ ದುಂದುವೆಚ್ಚಕ್ಕೆ ಹೇಗೆ ಕಡಿವಾಣ ಹಾಕಬೇಕು ಎನ್ನುವುದನ್ನು ಕಲಿಸಿಕೊಟ್ಟಿದೆ. ಜೊತೆಗೆ ಮಕ್ಕಳು ಕೂಡ ಮನೆಯಲ್ಲಿದ್ದು ಶಾಲೆ-ಕಾಲೇಜು ಆರಂಭಗೊಳ್ಳದ ಹಿನ್ನೆಲೆಯಲ್ಲಿ ಮಕ್ಕಳನ್ನು ಹೇಗಪ್ಪಾ ಕಂಟ್ರೋಲ್ ಮಾಡುವುದು, ಶಾಲೆ-ಕಾಲೇಜು ಒಮ್ಮೆ ಆರಂಭವಾದರೆ ಸಾಕು ಎನ್ನುವ ಅಭಿಪ್ರಾಯಕ್ಕೆ ಹೆತ್ತವರು ಒಳಗಾಗಿದ್ದರು ಎನ್ನುವುದು ನಿಜ. ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗದೆ ಸಮಾಜದಲ್ಲಿ ಉತ್ತಮ ಭವಿಷ್ಯವನ್ನು ವಿದ್ಯಾರ್ಥಿಗಳು ಕಂಡುಕೊಳ್ಳುವಂತಾಗಲಿ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ವಂ|ವಿಜಯ್ ಲೋಬೋರವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆಗೆ ಮತ್ತು ಅವರ ಸರ್ವಾಂಗೀಣ ಅಭಿವೃದ್ಧಿಗೆ ಫಿಲೋಮಿನಾ ವಿದ್ಯಾಸಂಸ್ಥೆಯು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಕೊರೋನಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಆನ್ಲೈನ್ ತರಗತಿಗಳನ್ನು ನಡೆಸುತ್ತಾ ಬಂದಿದೆ. ಫಿಲೋಮಿನಾ ಸಂಸ್ಥೆಯು ಕಳೆದ ಬಾರಿಯ ದ್ವಿತೀಯ ಪರೀಕ್ಷೆಯಲ್ಲಿ ರಾಜ್ಯದಲ್ಲಿ ನಾಲ್ಕು ರ್ಯಾಂಕ್ಗಳನ್ನು ಗಳಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ ಎಂದರು.
ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಮಾತನಾಡಿ, ಒಂದು ವರ್ಷದಿಂದ ಒಬ್ಬರನೊಬ್ಬರ ಮುಖ ನೋಡದೆ ಕಾಲವನ್ನು ಕಳೆದಿದ್ದೇವೆ. ಮಕ್ಕಳನ್ನು ಕಾಲೇಜಿಗೆ ಕಳುಹಿಸುವುದು ಮಕ್ಕಳು ಒಳ್ಳೆಯ ವಿದ್ಯಾಭ್ಯಾಸ ಪಡೀಬೇಕು ಮತ್ತು ಮಕ್ಕಳು ಸುಶಿಕ್ಷಿತರಾಗಬೇಕು ಎನ್ನುವ ದೃಷ್ಟಿಯಿಂದ. ವಿದ್ಯಾರ್ಥಿಗಳು ವೈದ್ಯರು, ಇಂಜಿನಿಯರ್ ಆಗಬೇಕು ಆಗುವ ಕನಸನ್ನು ಹೊಂದುವ ಬದಲು ಶಿಕ್ಷಕರಾಗಿ, ಸರಕಾರಿ ಕಛೇರಿಗಳಲ್ಲಿ ಅಧಿಕಾರಿಗಳಾಗಿ. ಪ್ರಸ್ತುತ ದಿನಗಳಲ್ಲಿ ಡಬ್ಬಲ್ ಡಿಗ್ರಿ ಮಾಡಿದರೂ ಉದ್ಯೋಗ ಸಿಗುವುದಿಲ್ಲ. ಕೃಷಿಪ್ರಧಾನವಾದ ನಮ್ಮ ದೇಶದಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜೊತೆಗೆ ಕೃಷಿಯಲ್ಲೂ ತೊಡಗಿಸಿಕೊಳ್ಳುವಂತಾಗಲಿ ಎಂದರು.
ಪ್ರದರ್ಶನ ಕಲಾ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿ ಉಪನ್ಯಾಸಕ ಪ್ರಶಾಂತ್ ಭಟ್ ಸ್ವಾಗತಿಸಿ, ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಕೋಶಾಧಿಕಾರಿ ಉಪನ್ಯಾಸಕ ಅನಿಲ್ ಕುಮಾರ್ರವರು ಲೆಕ್ಕಪತ್ರವನ್ನು ಮಂಡಿಸಿ, ವಂದಿಸಿದರು. ಉಪನ್ಯಾಸಕಿ ಡಾ|ಆಶಾ ಸಾವಿತ್ರಿ ಕಾರ್ಯಕ್ರಮ ನಿರೂಪಿಸಿದರು.
ಅಧ್ಯಕ್ಷರಾಗಿ ಶಶಿಕುಮಾರ್ ರೈ ಪುನರಾಯ್ಕೆ…
ಈಗಾಗಲೇ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಮುಂದಿನ ೨೦೨೦-೨೧ನೇ ಶೈಕ್ಷಣಿಕ ಸಾಲಿನ ಅಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆಗೊಂಡಿದ್ದಾರೆ. ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ಶಶಿಕುಮಾರ್ ರೈ ಬಾಲ್ಯೊಟ್ಟುರವರನ್ನು ಸಂಸ್ಥೆಯ ಸಂಚಾಲಕರಾದ ವಂ|ಲಾರೆನ್ಸ್ ಮಸ್ಕರೇನ್ಹಸ್ರವರು ಹೂಗುಚ್ಛ ನೀಡಿ ಗೌರವಿಸಿದರು. ಕೃಷಿಕರಾದ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಪ್ರಸ್ತುತ ಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ಸಂಘಕ್ಕೆ ಕಾರ್ಯಕಾರಿ ಸಮಿತಿಯನ್ನು ಈ ಸಂದರ್ಭದಲ್ಲಿ ರಚಿಸಲಾಯಿತು.