HomePage_Banner
HomePage_Banner
HomePage_Banner
HomePage_Banner

ಜಿಲ್ಲೆಯಾದ್ಯಂತ ಸಮಾರಂಭ, ಉತ್ಸವಗಳಿಗೆ ನಿರ್ಬಂಧ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಮದುವೆಗೆ 50 ಜನ ಮಾತ್ರ

ಚೆಕ್‌ಪೋಸ್ಟ್‌ಗಳಲ್ಲಿ 24×7 ತಪಾಸಣೆ ಕಡ್ಡಾಯ

ಕಾಸರಗೋಡು-ಮಂಗಳೂರು ಬಸ್ ಸಂಚಾರ ಬಂದ್

ಕಾಸರಗೋಡಿನಿಂದ ಬರುವ ವಿದ್ಯಾರ್ಥಿಗಳಿಗೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಅಗತ್ಯ

ಹೊರರಾಜ್ಯದಿಂದ ಬರುವ ನರ್ಸಿಂಗ್ ವಿದ್ಯಾರ್ಥಿಗಳಿಗೆ 1 ವಾರ ಕಡ್ಡಾಯ ಕ್ವಾರಂಟೈನ್

ಕೇರಳದಲ್ಲಿ ಕೋವಿಡ್ ಮತ್ತೆ ಹೆಚ್ಚಳ ಹಿನ್ನೆಲೆ: ಡಿಸಿ ಆದೇಶ

ಪುತ್ತೂರು: ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕೆಲವೊಂದು ನಿರ್ಬಂಧಗಳನ್ನು ವಿಧಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಎಲ್ಲಾ ಸಾಮಾಜಿಕ/ರಾಜಕೀಯ/ಸಾಂಸ್ಕೃತಿಕ/ಧಾರ್ಮಿಕ ಕಾರ್ಯಕ್ರಮಗಳು, ಸಮಾರಂಭಗಳು ಮತ್ತು ಉತ್ಸವಗಳನ್ನು ನಿರ್ಬಂಧಿಸಲಾಗಿದೆ.ಪೂಜಾ ಸ್ಥಳಗಳಾದ ದೇವಾಲಯಗಳು, ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಜಾತ್ರೆಗಳನ್ನು, ಧಾರ್ಮಿಕ ಉತ್ಸವಗಳು, ಮೆರವಣಿಗೆಗಳನ್ನು ನಿಬಂಧಿಸಲಾಗಿದೆ.

ಮದುವೆಗೆ 50  ಮಂದಿ ಮಾತ್ರ:
ಮದುವೆಯನ್ನು ಗರಿಷ್ಠ 50 ಜನರ ಪರಿಮಿತಿಗೊಳಪಟ್ಟು, ಸ್ಥಳೀಯ ಆಡಳಿತದ ಪ್ರಾಧಿಕಾರಗಳಿಂದ ಪೂರ್ವಾನುಮತಿಯೊಂದಿಗೆ ಆಯೋಜಿಸಲು ಅನುಮತಿ ನೀಡಲಾಗಿದೆ. ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯ ಅಧಿಕಾರಿಗಳು ಸಮಾರಂಭಕ್ಕೆ ಭೇಟಿ ನೀಡಿ ಕೋವಿಡ್ ನಿಯಮಾವಳಿ ಉಲ್ಲಂಘನೆ ಆಗದೇ ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಮತ್ತು ಮಂಗಳೂರು ನಡುವಿನ ಕೆಎಸ್‌ಆರ್‌ಟಿಸಿ ಮತ್ತು ಎಲ್ಲಾ ಖಾಸಗಿ ಬಸ್ಸುಗಳ ಸಂಚಾರವನ್ನು ಆ.1ರಿಂದ 7ರವರೆಗೆ ನಿರ್ಬಂಧಿಸಲಾಗಿದೆ.

ಲಸಿಕೆ ಪಡೆದಿದ್ದರೂ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ:
ಕಾಸರಗೋಡು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ದಿನಂಪ್ರತಿ ಪ್ರಯಾಣಿಸುವವರು ಕಾಲೇಜು ವಿದ್ಯಾರ್ಥಿಗಳು ಕೋವಿಡ್ ಲಸಿಕೆ ಪಡೆದಿದ್ದರೂ(2 ಡೋಸ್ ಆಗಿದ್ದರೂ)72ಗಂಟೆಗಳ ಒಳಗೆ ಮಾಡಿಸಿರುವ ಆರ್‌ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಯ ಆಧಾರದಲ್ಲಿ 7ದಿನಗಳ ಅವಧಿಗೆ ಅನುಮತಿಸಲಾಗುವುದು.ಕೇರಳ, ಮಹಾರಾಷ್ಟ್ರ, ಇತರೆ ಹೊರರಾಜ್ಯದಿಂದ ನರ್ಸಿಂಗ್ ಯಾ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಆರ್‌ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಯೊಂದಿಗೆ ಮಂಗಳೂರಿಗೆ ಬಂದ ಬಳಿಕ ಒಂದು ವಾರ ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಪಡಬೇಕು.ಏಳು ದಿನದ ಬಳಿಕ ಮತ್ತೊಮ್ಮೆ ಕೋವಿಡ್ ತಪಾಸಣೆಗೆ ಒಳಪಡಿಸತಕ್ಕದ್ದು.ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ತರದೇ ರೈಲು ಮೂಲಕ ಗಡಿ ಪ್ರವೇಶಿಸಿದ ವ್ಯಕ್ತಿಗಳು ರೈಲ್ವೇ ಸ್ಟೇಷನ್‌ಗಳಲ್ಲಿ ಕೋವಿಡ್ ತಪಾಸಣೆಗೆ ಒಳಪಡಬೇಕು.ತಪಾಸಣೆಯ ವೇಳೆ ಪಾಸಿಟಿವ್ ವರದಿ ಬಂದಲ್ಲಿ ಯಾ ವರದಿ ಬರುವವರೆಗೆ ಕೋವಿಡ್ ಕೇರ್ ಸೆಂಟರ್‌ನಲ್ಲಿ ಕ್ವಾರಂಟೈನ್ ಆಗುವುದು ಕಡ್ಡಾಯವಾಗಿದೆ.ಈ ಬಗ್ಗೆ ಸಂಬಂಧಪಟ್ಟ ತಹಸಿಲ್ದಾರರು ಕೋವಿಡ್ ಕೇರ್ ಸೆಂಟರ್ ತೆರೆಯಲು ಕ್ರಮವಹಿಸಬೇಕು.

ಚೆಕ್ ಪೋಸ್ಟ್‌ಗಳಲ್ಲಿ ಸಿಬಂದಿಗಳನ್ನು ನಿಯೋಜಿಸಿ 24×7 ತಪಾಸಣೆ ನಡೆಯುವ ಬಗ್ಗೆ ಸಂಬಂಧಪಟ್ಟ ಉಪವಿಭಾಗಾಧಿಕಾರಿ ಹಾಗೂ ಉಪ ಪೊಲೀಸ್ ಅಧೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಖಾತ್ರಿ ಪಡಿಸಿಕೊಳ್ಳಬೇಕು. ವೈದ್ಯಕೀಯ ತುರ್ತು ಸೇವೆ, ಆಂಬುಲೆನ್ಸ್ ಹಾಗೂ ಅಂತರ್‌ರಾಜ್ಯ ಸರಕು ಸಾಮಾಗ್ರಿಗಳ ಸಾಗಾಟಕ್ಕೆ ನಿರ್ಬಂಧವಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರು ಜು.31ರಂದು ಆದೇಶ ಹೊರಡಿಸಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದೆ.ನೆರೆಯ ರಾಜ್ಯ ಯಾ ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಹರಡುವ ಸಾಧ್ಯತೆಗಳಿರುವುದರಿಂದ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸಾರ್ವಜನಿಕರು ಮುಕ್ತವಾಗಿ ಓಡಾಡುವುದನ್ನು ಹಾಗೂ ಬೆರೆಯುವುದನ್ನು ತಡೆಯುವುದು ಅನಿವಾರ್ಯವಾಗಿರುತ್ತದೆ.ಅಲ್ಲದೆ, ಸಂಭಾವ್ಯ ಅಪಾಯವನ್ನು ತಪ್ಪಿಸಲು ಕೂಡಲೇ ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು ಎಂದು ತಜ್ಞರು ಸರಕಾರಕ್ಕೆ ಸಲಹೆ ನೀಡಿದ್ದರು.ಪ್ರಸ್ತುತ ದ.ಕ.ಜಿಲ್ಲೆಯಲ್ಲಿಯೂ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು ಈ ಹಂತದಲ್ಲಿಯೇ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಅನುಷ್ಠಾನಗೊಳಿಸಿ ಸಂಭಾವ್ಯ ೩ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಅನಿವಾರ್ಯವಾಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲೆಯಲ್ಲಿ 365 ಮಂದಿಗೆ ಸೋಂಕು, 7 ಸಾವು:ಪಾಸಿಟಿವಿಟಿ ದರ ಶೇ.5.59
ದ.ಕ.ಜಿಲ್ಲೆಯಲ್ಲಿ ಜು.31ರಂದು ಹೊಸದಾಗಿ 365 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.7 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.ಕೋವಿಡ್ ಪಾಸಿಟಿವಿಟಿ ದರ ಶೇ.5.59ಕ್ಕೇರಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 100370ಕ್ಕೇರಿಕೆಯಾಗಿದೆ.ಮೃತಪಟ್ಟವರ ಸಂಖ್ಯೆ 1424ಕ್ಕೇರಿದೆ.ಪ್ರಸ್ತುತ 2803 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾಧಿಕಾರಿ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಹಿತ ಗಡಿ ಭಾಗದ ೭ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆಕ್ಸಿಜನ್ ಪೂರೈಕೆ, ಔಷಧಿ ಲಭ್ಯತೆ, ಮುನ್ನೆಚ್ಚರಿಕೆ ಕ್ರಮಗಳು, ಗಡಿ ಭಾಗಗಳಲ್ಲಿ ತಪಾಸಣೆ ಮೊದಲಾದ ವಿಷಯಗಳ ಕುರಿತು ವಿವರವಾಗಿ ಚರ್ಚಿಸಿದರು.
ಕೋವಿಡ್ ಎರಡನೇ ಅಲೆಯನ್ನು ಕಠಿಣ ಪರಿಶ್ರಮದಿಂದ ಕೇವಲ ಒಂದೂವರೆ ತಿಂಗಳ ಅವಧಿಯಲ್ಲಿ ನಿಯಂತ್ರಿಸಲಾಗಿದೆ. ಈಗ ಮತ್ತೆ ಪ್ರಕರಣಗಳು ಹೆಚ್ಚಳವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಂತರ್ ರಾಜ್ಯ ಗಡಿ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ.ಗಡಿಭಾಗದ ರಾಜ್ಯಗಳಿಂದ ರಾಜ್ಯಕ್ಕೆ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ.ಆರ್. ನೆಗೆಟಿವ್, ಎರಡೂ ಡೋಸ್ ವ್ಯಾಕ್ಸಿನ್ ಕಡ್ಡಾಯಗೊಳಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ಬಿಗಿ ಮಾಡಿ. ಹಿರಿಯ ಅಧಿಕಾರಿಗಳನ್ನು ನಿಯೋಜಿಸಿ. ಡಿವೈಎಸ್ಪಿ, ಉಪ ವಿಭಾಗಾಧಿಕಾರಿ, ವೈದ್ಯರು, ಮತ್ತು ಇತರ ಸಿಬ್ಬಂದಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸಬೇಕು. ಜಿಲ್ಲಾಧಿಕಾರಿಗಳು, ಎಸ್ಪಿ ಪ್ರತಿ ಎರಡು ದಿನಕ್ಕೊಮ್ಮೆ ಭೇಟಿ ನೀಡಿ ಪರಿಶೀಲಿಸಿ ಮುಖ್ಯ ಕಾರ್ಯದರ್ಶಿಗಳಿಗೆ ವರದಿ ನೀಡಬೇಕು ಎಂದು ಮುಖ್ಯಮಂತ್ರಿ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಬೇಕು. ಜೊತೆಗೆ ರೈಲು ನಿಲ್ದಾಣದಲ್ಲಿಯೂ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು. ಬಂದರುಗಳಲ್ಲಿಯೂ ಕಟ್ಟೆಚ್ಚರ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.ಸಹಾಯಕ ಆಯುಕ್ತ ಡಾ ಯತೀಶ್ ಉಳ್ಳಾಲ್ ಮತ್ತಿತರ ಅಧಿಕಾರಿಗಳು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಂದರ್ಭ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.