ಬೇಡಿಕೆ ಈಡೇರಿಕೆ-ಸರಕಾರದಿಂದ ಲಿಖಿತ ಭರವಸೆ- ಪೌರ ಕಾರ್ಮಿಕರ ಅನಿರ್ಧಿಷ್ಟ ಮುಷ್ಕರ ಅಂತ್ಯ

0

ಪುತ್ತೂರು: ಪೌರ ಕಾರ್ಮಿಕರನ್ನು ಗುತ್ತಿಗೆ ಪದ್ಧತಿ ಬದಲು ನೇರ ವೇತನಕ್ಕೆ ಒಳಪಡಿಸುವುದು, ಪೌರ ಕಾರ್ಮಿಕರ ಕೆಲಸ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ರಾಜ್ಯ ಸರಕಾರ ಲಿಖಿತರೂಪದಲ್ಲಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ, ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಅಂತ್ಯಗೊಂಡಿದೆ.ಮುಷ್ಕರಕ್ಕೆ ಬೆಂಬಲ ಸೂಚಿಸಿ ಪುತ್ತೂರು ನಗರಸಭೆಯ ಪೌರ ಕಾರ್ಮಿಕರು ಮಂಗಳೂರಿನಲ್ಲಿ ನಡೆಯುತ್ತಿದ್ದ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.

ಪೌರಕಾರ್ಮಿಕರ ಮುಷ್ಕರ ಸಂಬಂಧ ಜು.ರಂದು ಕಾರ್ಮಿಕರ ಮುಖಂಡರೊಂದಿಗೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದೆಂದು ಭರವಸೆ ನೀಡಿದ್ದರು.ಆದರೆ,ಮರುದಿನ ಇದು ಲಿಖಿತರೂಪದಲ್ಲಿ ಕೈಸೇರಿಲ್ಲ ಎಂದು ಪೌರಕಾರ್ಮಿಕರು ಮುಷ್ಕರ ಮುಂದುವರೆಸಿದ್ದರು.ಮುಷ್ಕರದ ನಾಲ್ಕನೆ ದಿನವಾದ ಜು.4ರಂದು ಸಂಜೆ ವೇಳೆಗೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ ಭರವಸೆಗಳನ್ನು ಲಿಖಿತ ರೂಪದಲ್ಲಿ ಅಧಿಕೃತ ಪ್ರತಿಯಲ್ಲಿ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನಗರಪಾಲಿಕೆ, ಪುರಸಭೆ, ನಗರಸಭೆ, ಪೌರಕಾರ್ಮಿಕರ ಮಹಾಸಂಘದ ನೇತೃತ್ವದಲ್ಲಿ ನಡೆಯುತ್ತಿದ್ದ ಮುಷ್ಕರವನ್ನು ಕೈಬಿಡಲಾಯಿತು.

ಭರವಸೆಗಳೇನು?: ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸರಕಾರದ ತಾತ್ವಿಕ ಒಪ್ಪಿಗೆ ಇದೆ.ಇದನ್ನು ಕಾನೂನುಬದ್ಧವಾಗಿ ಜಾರಿಗೊಳಿಸಲು ಸಮಿತಿಯೊಂದನ್ನು ರಚಿಸಿ, ಮೂರು ತಿಂಗಳೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ.ಅದೇರೀತಿ, ನೇಮಕಾತಿ ನಿಯಮಗಳಲ್ಲಿ ಮಾರ್ಪಾಡು ಹಾಗೂ ಸಚಿವ ಸಂಪುಟದ ಅನುಮೋದನೆಯನ್ನು ಹಾಗೂ ಉಭಯ ಸದನಗಳ ಅನುಮೋದನೆಯನ್ನು ಮೂರು ತಿಂಗಳಲ್ಲಿ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪೌರಕಾರ್ಮಿಕರಿಗೆ ಸಾಮಾಜಿಕವಾಗಿ ಗೌರವ, ಸೌಲಭ್ಯ ಹಾಗೂ ಸುರಕ್ಷತೆ ಅಗತ್ಯ ಎನ್ನುವುದು ಸರಕಾರಕ್ಕೆ ಮನವರಿಕೆಯಾಗಿದೆ.ಸರಕಾರವು ಪೌರಕಾರ್ಮಿಕರ ಸಮಸ್ಯೆಗಳಿಗೆ ಮಾನವೀಯತೆಯಿಂದ ಸ್ಪಂದಿಸಲಿದೆ.ಈ ಉದ್ದೇಶದಿಂದಲೇ ಆಯವ್ಯಯದಲ್ಲಿ ಪೌರಕಾರ್ಮಿಕರಿಗೆ ಮಾಸಿಕ 2000 ರೂ.ಸಂಕಷ್ಟ ಭತ್ಯೆ ಘೋಷಿಸಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.

ಇದರೊಂದಿಗೆ ಪೌರಕಾರ್ಮಿಕರ ನೇಮಕಾತಿ ಸರಳೀಕರಣಗೊಳಿಸಲು ವಿಶೇಷ ನೇಮಕಾತಿ ನಿಯಮಗಳನ್ನು ರೂಪಿಸಲಾಗುವುದು ಹಾಗೂ ನೇಮಕಾತಿ ನೀತಿಯನ್ನೂ ಜಾರಿಗೆ ತರಲಾಗುವುದು ಎಂದು ಹೇಳಿರುವ ಮುಖ್ಯಮಂತ್ರಿ,ಈ ಸಂದರ್ಭದಲ್ಲಿ ಐ.ಪಿ.ಡಿ. ಸಾಲಪ್ಪ ವರದಿ, ಚಂದ್ರಶೇಖರ್ ಸಮಿತಿ ವರದಿ ಹಾಗೂ ರಾಷ್ಟ್ರೀಯ ಕಾನೂನು ಶಾಲೆಯ ವರದಿಗಳನ್ನು ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಜೊತೆಗೆ ಬೇರೆ ರಾಜ್ಯಗಳಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಮಾಹಿತಿಯನ್ನೂ ಪಡೆಯಲು ಸೂಚಿಸಿದರು.

ಇದರೊಂದಿಗೆ ಪೌರಕಾರ್ಮಿಕರಿಗೆ ಪ್ರತ್ಯೇಕವಾಗಿ ಗೃಹಭಾಗ್ಯ ಯೋಜನೆ ಜಾರಿಗೊಳಿಸಲು ಹೊಸದಾಗಿ ಮಂಜೂರಾತಿ ನೀಡಲಾಗುವುದು. ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ರೈತ ವಿದ್ಯಾನಿಧಿ ಮಾದರಿಯಲ್ಲಿ ವಿದ್ಯಾರ್ಥಿ ವೇತನ ನೀಡಲಾಗುವುದು.ಪೌರಕಾರ್ಮಿಕ ಮಹಿಳೆಯರಿಗೆ ಸರಕಾರಿ ನೌಕರರಿಗೆ ನೀಡುವಂತೆ ಹೆರಿಗೆ ಸೌಲಭ್ಯಗಳನ್ನು ವಿಸ್ತರಿಸಲಾಗುವುದು. ಅದೇರೀತಿ, ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ಶೌಚಾಲಯ ಸೌಲಭ್ಯ ಒದಗಿಸಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತಿ ವಾರ್ಡ್‌ನಲ್ಲಿ ಒಂದು ಅಥವಾ ಎರಡು ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ.

ಬಿಬಿಎಂಪಿ ಹೊರತಾಗಿ ರಾಜ್ಯದ ಇತರ ಕಡೆ ಚಾಲ್ತಿಯಲ್ಲಿರುವ ಗುತ್ತಿಗೆ ಪದ್ಧತಿಯನ್ನು ಹಂತ ಹಂತವಾಗಿ ಕಸದ ನಿರ್ವಹಣೆಗೆ ತೊಂದರೆಯಾಗದಂತೆ ನೇರ ಪಾವತಿಯಡಿಯಲ್ಲಿ ತರಲಾಗುವುದು ಎಂದು ಮುಖ್ಯಮಂತ್ರಿ ಅಧಿಕೃತವಾಗಿ ತಿಳಿಸಿದ್ದಾರೆಂದು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಪ್ರಕಟಿಸಿದ್ದಾರೆ.ಈ ಭರವಸೆ ಹಿನ್ನೆಲೆಯಲ್ಲಿ ಪೌರಕಾರ್ಮಿಕರು ಅನಿರ್ಧಿಷ್ಟ ಮುಷ್ಕರವನ್ನು ಹಿಂಪಡೆದಿದ್ದಾರೆ.

ಇಂದಿನಿಂದ ಮತ್ತೆ ಕರ್ತವ್ಯಕ್ಕೆ

ರಾಜ್ಯವ್ಯಾಪಿ ನಡೆಯುತ್ತಿದ್ದ ಪೌರ ಕಾರ್ಮಿಕರ ಮುಷ್ಕರಕ್ಕೆ ಪುತ್ತೂರು ನಗರಸಭೆ ಪೌರ ಕಾರ್ಮಿಕರು ಬೆಂಬಲ ನೀಡಿದ್ದು, ಇದೀಗ ಬೇಡಿಕೆ ಈಡೇರಿಕೆ ಭರವಸೆ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದುಕೊಳ್ಳಲಾಗಿದ್ದು ಜು.5ರಿಂದ ಎಲ್ಲಾ ಪೌರ ಕಾರ್ಮಿಕರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಪೌರ ಕಾರ್ಮಿಕರ ಸಂಘ ಮತ್ತು ಹೊರಗುತ್ತಿಗೆ ನೌಕರರ ಸಂಘದ ಕರಾವಳಿ ಭಾಗದ ಸಂಚಾಲಕ ಬಿ.ಕೆ.ಅಣ್ಣಪ್ಪ ಕಾರೆಕ್ಕಾಡು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here