ರಾಮಕುಂಜೇಶ್ವರ ಮಹಾವಿದ್ಯಾಲಯದ ವಾರ್ಷಿಕೋತ್ಸವ

0

 

ರಾಮಕುಂಜ: ಕಡಬ ತಾಲೂಕಿನ ರಾಮಕುಂಜ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜು.9ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.


ಬೆಳಿಗ್ಗೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಮನುಷ್ಯನಿಗೆ ಬದುಕು ರೂಪಿಸಿಕೊಳ್ಳಲು ವಿದ್ಯೆ ಬೇಕು. ವಿದ್ಯೆಯ ಜೊತೆಗೆ ಸಂಸ್ಕೃತಿಯೂ ಮೇಳೈಸಿದಾಗ ಪರಿಶುದ್ಧ ನಾಗರಿಕನಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿದೆ. ನಮ್ಮ ದಿನ ನಿತ್ಯದ ಬದುಕು ಉತ್ಸವ ಆಗಬೇಕು. ಅಧ್ಯಯನದ ಜೊತೆಗೆ ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಕೊಳ್ಳಬೇಕೆಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧರ್ಮಪಾಲ ರಾವ್ ಕಜೆ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು. ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ದೇಶದ ಬಗ್ಗೆ ಚಿಂತನೆ ಮಾಡಬೇಕೆಂದು ಹೇಳಿದರು. ಮುಖ್ಯ ಅತಿಥಿಗಳಾಗಿದ್ದ ಉಪ್ಪಿನಂಗಡಿ ರಾಜ್ ಗ್ರೂಪ್ಸ್‌ನ ಕೃಷ್ಣರಾಜ ಬಿ., ನೆಟ್ಟಣ ಅಂಚೆಪಾಲಕ ಸುಂದರ ಶೆಟ್ಟಿ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್., ಸಂಚಾಲಕ ಟಿ.ನಾರಾಯಣ ಭಟ್, ಕೋಶಾಧಿಕಾರಿ ಕೆ.ಸೇಸಪ್ಪ ರೈ, ನಿವೃತ್ತ ಉಪನ್ಯಾಸಕ ಮಾಧವ ಆಚಾರ್ ಇಜ್ಜಾವು, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ದಿವಾಕರ ರಾವ್, ಕಾಲೇಜು ವಿದ್ಯಾರ್ಥಿ ನಾಯಕ ಭರತ್, ಕಾರ್ಯದರ್ಶಿ ಶೃತನ್, ಕ್ರೀಡಾ ಕಾರ್ಯದರ್ಶಿ ರೋಹಿತ್, ಸಾಂಸ್ಕೃತಿಕ ಕಾರ್ಯದರ್ಶಿ ಶರಧಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಾಂಶುಪಾಲ ಗಣರಾಜ್ ಕುಂಬ್ಳೆ ವರದಿ ಮಂಡಿಸಿದರು. ಆಡಳಿತ ಮಂಡಳಿ ಸದಸ್ಯ ಲಕ್ಷ್ಮೀನಾರಾಯಣ ರಾವ್ ಆತೂರು ಸ್ವಾಗತಿಸಿ, ಉಪನ್ಯಾಸಕ ದಿವಾಕರ ವಂದಿಸಿದರು. ಉಪನ್ಯಾಸಕಿ ಸುರಕ್ಷಿತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಬಹುಮಾನ ವಿತರಣೆ:
ಕಲಿಕೆ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಉಪನ್ಯಾಸಕಿ ಸುಜಾತ, ದೈಹಿಕ ಶಿಕ್ಷಣ ನಿರ್ದೇಶಕ ಗಣೇಶ್ ವಿದ್ಯಾರ್ಥಿಗಳ ಹೆಸರು ವಾಚಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಂಜೆಯ ತನಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here