ಉಪ್ಪಿನಂಗಡಿಯಲ್ಲಿ ಕಾಂಗ್ರೆಸ್ ಪತ್ರಿಕಾಗೋಷ್ಠಿ

0

  • ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ-ಡಾ. ರಾಜಾರಾಮ್
  • ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಇದಕ್ಕೆಲ್ಲ ಹೊಣೆಗಾರರು
  • ಅಸಮರ್ಥ ಗೃಹ ಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ನಿಯಂತ್ರಣ ಇಲ್ಲದಂತಾಗಿದೆ.

ಉಪ್ಪಿನಂಗಡಿ: ಬೆಳ್ಳಾರೆಯಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಮತ್ತೆ ಸುರತ್ಕಲ್‌ನಲ್ಲಿ ಫಾಝಿಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ. ಆಪಾದಿಸಿದರು.

 


ಅವರು ಜುಲೈ 30ರಂದು ಉಪ್ಪಿನಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಇದಕ್ಕೆಲ್ಲ ಹೊಣೆಗಾರರು. ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಫಾಝಿಲ್ ಹತ್ಯೆ ಅವರ ದುರಾಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದ ಅವರು, ಅಸಮರ್ಥ ಗೃಹ ಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ಮುಖ್ಯಮಂತ್ರಿಗಳು ಗೃಹಸಚಿವ ಸ್ಥಾನದಿಂದ ಆರಗ ಜ್ಞಾನೇಂದ್ರ ಅವರನ್ನು ತಕ್ಷಣ ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದರು.

ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಯಾವುದೇ ಸಂಘಟನೆ ಸೇರಿದ್ದರೂ, ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿರುವ ರಾಜ್ಯ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರು ಅವರನ್ನು ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟಬೇಕು. ಆದರೆ ರಾಜ್ಯ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಜನಾಕ್ರೋಶವನ್ನು ಶಾಂತಗೊಳಿಸಲು ತನಿಖೆಯ ನೆಪದಲ್ಲಿ ಆರೋಪಿಗಳ ಹೊರತಾಗಿ ಅಮಾಯಕರಿಗೆ ಕಿರುಕುಳ ನೀಡುವುದು ಸಲ್ಲದು ಎಂದರು.

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅಂತಿಮ ದರ್ಶನಕ್ಕೆ ಆಗಮಿಸಿದ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಸಚಿವ ಸುನಿಲ್ ಕುಮಾರ್, ವಿ.ಎಚ್.ಪಿ. ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಸ್ಥಳೀಯ ಶಾಸಕರ ವಿರುದ್ಧ ಭುಗಿಲೆದ್ದ ಜನಾಕ್ರೋಶದ ಹಿನ್ನೆಲೆಯನ್ನೂ ಪೊಲೀಸರು ತನಿಖೆ ಮಾಡಬೇಕಾಗಿದೆ. ನಳಿನ್ ಕುಮಾರ್ ಕಟೀಲ್ ಅವರಿಗೆ ಆತ್ಮೀಯನಾಗಿದ್ದ ಮೃತ ಪ್ರವೀಣ್ ನೆಟ್ಟಾರ್ ಒಂದಷ್ಟು ಕಾಲ ನಳಿನ್ ಅವರ ಕಾರಿಗೆ ಚಾಲಕನೂ ಆಗಿದ್ದರಂತೆ. ಇಷ್ಟೊಂದು ಆತ್ಮೀಯರಾಗಿದ್ದವರು ದೂರವಾಗಿರುವುದು ಯಾಕೆ? ಪೊಲೀಸರು ಈ ವಿಚಾರವನ್ನೂ ಸೂಕ್ಷ್ಮವಾಗಿ ಪರಿಗಣಿಸಿದರೆ ದುಷ್ಕರ್ಮಿಗಳ ಪತ್ತೆಗೆ ನೆರವಾದೀತು ಎಂದು ಡಾ. ರಾಜಾರಾಮ್ ಹೇಳಿದರು.

ಹಿಂದುಗಳು ಸತ್ತರೆ ಮುಸ್ಲಿಮರ ಮೇಲೆ, ಮುಸ್ಲಿಮರು ಸತ್ತರೆ ಹಿಂದುಗಳ ಮೇಲೆ ಸಂಶಯ ಪಡುವುದು ಸಾಮಾನ್ಯವಾಗಿ ಬಿಟ್ಟಿದೆ. ಪೊಲೀಸ್ ತನಿಖೆಯೂ ಇದೇ ಜಾಡಿನಲ್ಲಿ ಸಾಗುತ್ತಿರುವುದರಿಂದ ಸಾವಿನ ಹಿಂದಿನ ಅಸಲಿ ಸತ್ಯ ಹೊರಗೆ ಬರದೆ ಮುಚ್ಚಿಹೋಗುತ್ತಿದೆ. ಅಸಮರ್ಥ ಗೃಹ ಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ನಿಯಂತ್ರಣ ಇಲ್ಲದಂತಾಗಿದೆ. ಎಂದು ಆರೋಪಿಸಿದ ಅವರು, ಯಾವುದಾದರೂ ಸಂಘಟನೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದರೆ ಅವುಗಳನ್ನು ನಿಷೇಧಿಸುವ ದಿಟ್ಟತನವನ್ನು ರಾಜ್ಯ ಸರ್ಕಾರ ತೋರಬೇಕು ಎಂದರು.

ನಳಿನ್ ಕುಮಾರ್ ಕಟೀಲ್ ಅವರು ಬಹಿರಂಗವಾಗಿ ಮುಸ್ಲಿಮರ ಬಗ್ಗೆ ಬೆಂಕಿ ಕಾರಿದರೂ, ಮುಸ್ಲಿಂ ಉದ್ಯಮಿಗಳ ಜೊತೆ ಅವರಿಗೆ ಹಾರ್ದಿಕ ಸಂಬಂಧ ಇರುವುದನ್ನು ಅವರೇ ಹಲವಾರು ಬಾರಿ ಬಹಿರಂಗ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ಈ ಸಂಬಂಧಗಳು ಕೇವಲ ಸಾಮಾಜಿಕವಾದುದ್ದೇ? ಇಲ್ಲವೇ ವ್ಯಾಪಾರ ವಹಿವಾಟಿನದ್ದೇ? ದಕ್ಷಿಣಕನ್ನಡ ಜಿಲ್ಲೆಯಲ್ಲಿ ಯಾಕೆ ಹಿಂದುಳಿದ ಜಾತಿಗಳ ಯುವಕರೇ ಕೋಮು ಘರ್ಷಣೆಯಲ್ಲಿ ಬಲಿಯಾಗುತ್ತಿದ್ದಾರೆ? ರಾಜಕೀಯ ಪ್ರಾತಿನಿಧ್ಯ ಕಳೆದುಕೊಳ್ಳುತ್ತಿರುವ ಈ ಸಮುದಾಯದ ಯುವಕರು ಪ್ರಾಣವನ್ನೂ ಯಾಕೆ ಕಳೆದುಕೊಳ್ಳುತ್ತಿದ್ದಾರೆ? ಈ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಯಾಕೆ ಈವರೆಗೂ ಪ್ರವೀಣ್ ನೆಟ್ಟಾರ್ ಮನೆಗೆ ಭೇಟಿ ನೀಡಿಲ್ಲ? ಬಸವರಾಜ ಬೊಮ್ಮಾಯಿ ಅವರು ಕೇವಲ ಬಿಜೆಪಿ ಕಾರ್ಯಕರ್ತರಿಗಷ್ಟೇ ಮುಖ್ಯಮಂತ್ರಿಗಳೋ? ಇಲ್ಲವೇ ರಾಜ್ಯದ ಸಮಸ್ತ ಆರುವರೆ ಕೋಟಿ ಜನತೆಗೋ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು. ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿಗಳು ದುಷ್ಕರ್ಮಿಗಳ ದಾಳಿಯಿಂದ ಬಲಿಯಾಗಿದ್ದ ಮಸೂದ್ ಮನೆಗೆ ಹೋಗದಿರಲು ಕಾರಣ ಏನೆಂಬುದನ್ನು ಸ್ಪಷ್ಟಪಡಿಸಬೇಕು. ಆದರೆ ವಿಚಾರಣಾ ಹಂತದಲ್ಲಿರುವ ಹತ್ಯೆ ಪ್ರಕರಣಗಳಲ್ಲಿ ಕುಟುಂಬಗಳಿಗೆ ಪರಿಹಾರ ನೀಡುವಾಗ ತಾರತಮ್ಯ ಆಗದಂತೆ ಎಚ್ಚರಿಕೆ ವಹಿಸುವುದು ಮುಖ್ಯಮಂತ್ರಿಗಳ ಕರ್ತವ್ಯವಾಗಿದೆ ಎಂದ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪಕ್ಷ ಇಲ್ಲವೇ ಸರ್ಕಾರದ ಮೇಲೆ ಯಾವುದೇ ನಿಯಂತ್ರಣ ಇಲ್ಲ. ಅಸಹಾಯಕರಾಗಿರುವ ಬೊಮ್ಮಾಯಿಯವರು ಕುರ್ಚಿ ಉಳಿಸಿಕೊಳ್ಳಲಿಕ್ಕಾಗಿ ಹರಸಾಹಸ ಪಡುತ್ತಿದ್ದಾರೆ ಎಂದರು.

ಮಾಜಿ ಸಚಿವ ಈಶ್ವರಪ್ಪನವರು ಈ ಬಾರಿ ಸತ್ಯ ಮಾತಾಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಪ್ರಬುದ್ಧರಲ್ಲ, ಮೆಚ್ಯುರಿಟಿ ಕಡಿಮೆ ಎನ್ನುವ ಹೇಳಿಕೆ ನೀಡಿದ್ದಾರೆ. ಈ ಮೂಲಕ ಅವರz ಪಕ್ಷದ ಕಾರ್ಯಕರ್ತರ ಅರ್ಹತೆಗೆ ಸರ್ಟಿಫಿಕೇಟ್ ನೀಡಿದ್ದಾರೆ. ಈ ರಾಜ್ಯದ ಜವಾಬ್ದಾರಿಯುತ ಸಂಸದರೊಬ್ಬರು ಹೇಳಿಕೆ ನೀಡಿ, ಈಗ ನಮ್ಮ ಸರಕಾರ ಅಲ್ಲದೇ ಇರುತ್ತಿದ್ದರೆ ಕಲ್ಲೆಸೆದು ದೊಂಬಿ ಎಬ್ಬಿಸುತ್ತಿದ್ದೆವು ಎನ್ನುವ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇನ್ನೊಬ್ಬ ಸಂಸದರು ಎನ್‌ಕೌಂಟರ್ ಮಾಡುವ ಹೇಳಿಕೆ ನೀಡಿ ಇನ್ನಷ್ಟು ಸಾಮಾಜಿಕ ಅಶಾಂತಿ ಸೃಷ್ಟಿಸಿ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿದ್ದಾರೆ. ಇನ್ನಾದರೂ ಸರಕಾರ ಎಚ್ಚೆತ್ತುಕೊಂಡು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೈಗೊಂಡು, ಸಾರ್ವಜನಿಕ ವಲಯದಲ್ಲಿರುವ ಭಯದ ವಾತಾವರಣ ಹೋಗಲಾಡಿಸಿ ಶಾಂತಿ, ಸೌಹಾರ್ದತೆ ಮೂಡಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್‍ಯದರ್ಶಿ ಮುರಳೀಧರ ರೈ ಮಠಂತಬೆಟ್ಟು, ದ.ಕ. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸೋಮನಾಥ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್‍ಯದರ್ಶಿಗಳಾದ ಅಬ್ದುಲ್ ರಹಿಮಾನ್ ಯುನಿಕ್, ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here