ಆ.13ರಿಂದ 15:ಎಲ್ಲ ನ್ಯಾಯಾಲಯಗಳು,ನ್ಯಾಯಾಂಗ ಅಧಿಕಾರಿಗಳ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಲು ಹೈಕೋರ್ಟ್ ಸೂಚನೆ

0

ಪುತ್ತೂರು:ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನದ ಭಾಗವಾಗಿ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಮತ್ತು ನ್ಯಾಯಾಂಗ ಅಧಿಕಾರಿಗಳ ಮನೆಗಳಲ್ಲಿ ಆ.13 ರಿಂದ 15ರವರೆಗೆ ರಾಷ್ಟ್ರಧ್ವಜವನ್ನು ಹಾರಿಸಬೇಕೆಂದು ಹೈಕೋರ್ಟ್ ಸುತ್ತೋಲೆ ಹೊರಡಿಸಿದೆ.

ಈ ಸಂಬಂಧ ಹಂಗಾಮಿ ಸಿಜೆ ಅಲೋಕ್ ಆರಾಧೆ ಅವರ ಆದೇಶದಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಅವರು ಸುತ್ತೋಲೆ ಹೊರಡಿಸಿದ್ದಾರೆ.ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಮತ್ತು ನ್ಯಾಯಾಂಗ ಅಧಿಕಾರಿಗಳ ಮನೆಯಲ್ಲಿ ಆ.13ರಿಂದ 15ರವರೆಗೆ ರಾಷ್ಟ್ರ ಧ್ವಜವನ್ನು ಹಾರಿಸಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಸಚಿವರು ಪತ್ರ ಬರೆದು, ಸ್ವಾತಂತ್ರ್ಯ ಅಮೃತ ಮಹೋತ್ಸವ ಭಾಗವಾಗಿ ಮನೆ ಮನೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಅಭಿಯಾನದ ಮಾಹಿತಿ ನೀಡಿದ್ದಾರೆ. ಭಾರತೀಯ ತ್ರಿವರ್ಣ ಧ್ವಜವು ರಾಷ್ಟ್ರೀಯ ಹೆಮ್ಮಯ ಸಂಕೇತವಾಗಿದೆ.ಧ್ವಜಕ್ಕೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅನುಷ್ಠಾನ ಸಮಿತಿಯು ಪ್ರತಿ ಭಾರತೀಯ ಪ್ರಜೆ ತನ್ನ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವುದಕ್ಕೆ ಪ್ರೋತ್ಸಾಹ ನೀಡಲು ಅಮೃತ ಮಹೋತ್ಸವ ಅಡಿಯ ‘ಹರ್ ಘರ್ ತಿರಂಗಾ’ ಕಾರ್ಯಕ್ರಮಕ್ಕೆ ಅನುಮೋದನೆ ನೀಡಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here