ಹೈಕೋರ್ಟ್ ಆದೇಶದಂತೆ ಎಸಿಬಿ ಸಿಬ್ಬಂದಿಗಳು, ಪ್ರಕರಣಗಳನ್ನು ಕೂಡಲೇ ವರ್ಗಾಯಿಸಿ : ರಾಜ್ಯ ಸರಕಾರಕ್ಕೆ ಕರ್ನಾಟಕ ಲೋಕಾಯುಕ್ತ ಸೂಚನೆ

0

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿ ರಾಜ್ಯ ಹೈಕೋರ್ಟ್ ಈಗಾಗಲೇ ಆದೇಶ ಹೊರಡಿಸಿರುವುದರಿಂದ ಭ್ರಷ್ಟಾಚಾರ ನಿಗ್ರಹ ದಳದಿಂದ ಸಿಬ್ಬಂದಿಗಳನ್ನು ಮತ್ತು ಎಲ್ಲ ಪ್ರಕರಣಗಳನ್ನು ಶೀಘ್ರವಾಗಿ ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಲೋಕಾಯುಕ್ತ ಸೂಚನೆ ನೀಡಿದೆ.
ಎಸಿಬಿಯನ್ನು ರದ್ದುಗೊಳಿಸಿ, ಎಸಿಬಿಯಲ್ಲಿರುವ ಎಲ್ಲ ಪ್ರಕರಣಗಳನ್ನು ಮತ್ತು ಸಿಬ್ಬಂದಿಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ ಭ್ರಷ್ಟಾಚಾರ ನಿಗ್ರಹ ದಳದಿಂದ ಪ್ರಕರಣಗಳು ಮತ್ತು ಸಿಬ್ಬಂದಿಯನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದ್ದು, ಅನುಷ್ಠಾನಕ್ಕೆ ಕ್ರಮಕೈಗೊಳ್ಳುವಂತೆ ಲೋಕಾಯುಕ್ತ ರಿಜಿಸ್ಟಾçರ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಪತ್ರ ಬರೆದಿದ್ದಾರೆ.
ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಸಿಬಿ ಸ್ಥಾಪನೆ ಮತ್ತು ಲೋಕಾಯುಕ್ತರ ಅಧಿಕಾರವನ್ನು ಹಿಂಪಡೆಯುವ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ವಿಚಾರಣೆ ಮತ್ತು ಇತರ ಪ್ರಕ್ರಿಯೆಗಳನ್ನು ವರ್ಗಾಯಿಸಲು ಕ್ರಮಕೈಗೊಳ್ಳಲು ಆದೇಶದ ಪ್ರತಿಯನ್ನು ಮುಖ್ಯ ಕಾರ್ಯದರ್ಶಿಗೆ ಕಳುಹಿಸಲು ರಿಜಿಸ್ಟ್ರಾರ್‌ಗೆ ಸೂಚಿಸಿತ್ತು. .

ಲೋಕಾಯುಕ್ತ ಪೊಲೀಸ್ ವಿಭಾಗವನ್ನು ಬಲಪಡಿಸಬೇಕು:
ಎಸಿಬಿಯನ್ನು ರದ್ದುಪಡಿಸಿ,ಅದರ ಪ್ರಕರಣಗಳು ಮತ್ತು ಸಿಬ್ಬಂದಿಯನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲು ಆಗಸ್ಟ್ 11ರಂದು ಹೈಕೋರ್ಟ್ ಆದೇಶಿಸಿತ್ತು.ಈ ತೀರ್ಪಿನ ದಿನಾಂಕದವರೆಗಿನ ಎಸಿಬಿ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಬೇಕು.ಬಾಕಿ ಇರುವ ಹಂತದಿಂದ ಕಾನೂನಿಗೆ ಅನುಸಾರವಾಗಿ ಮುಂದುವರಿಯಬೇಕು ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿತ್ತು.ಎಸಿಬಿ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯ ಸರಕಾರ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸದಿರಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದರು.ಆದರೂ, ಹೈಕೋರ್ಟ್ ಆದೇಶ ನೀಡಿ ಎರಡು ವಾರಗಳು ಕಳೆದರೂ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎನ್ನಲಾಗಿದೆ.
ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 12(4)ಕ್ಕೆ ತಿದ್ದುಪಡಿಯನ್ನು ಶಿಫಾರಸು ಮಾಡುವುದರ ಜೊತೆಗೆ, ದುರಾಡಳಿತ ಪ್ರಕರಣಗಳಲ್ಲಿ ಲೋಕಾಯುಕ್ತರ ಶಿಫಾರಸಿನ ಆಧಾರದ ಮೇಲೆ ಸರ್ಕಾರವು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮವನ್ನು ಪ್ರಾರಂಭಿಸಬೇಕು,ಇದು ಅಸ್ತಿತ್ವದಲ್ಲಿರುವ ನಿಬಂಧನೆಗಳ ಅಡಿಯಲ್ಲಿ ಕಡ್ಡಾಯವಲ್ಲ.ಪ್ರಾಮಾಣಿಕತೆ ಮತ್ತು ನ್ಯಾಯಸಮ್ಮತತೆಯ ದಾಖಲೆ ಹೊಂದಿರುವ ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸಿ/ನಿಯೋಜನೆ ಮಾಡುವ ಮೂಲಕ ಲೋಕಾಯುಕ್ತದ ಪೊಲೀಸ್ ವಿಭಾಗವನ್ನು ಬಲಪಡಿಸಲು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ಅಸ್ತಿತ್ವದಲ್ಲಿರುವ ಲೋಕಾಯುಕ್ತ ಪೊಲೀಸ್ ವಿಭಾಗವನ್ನು ಬಲಪಡಿಸಲು ಮತ್ತು ಪ್ರಕರಣಗಳನ್ನು ಪರಿಣಾಮಕಾರಿಯಾಗಿ ವಿಚಾರಣೆ ಮಾಡಲು ಮತ್ತು ತನಿಖೆ ಮಾಡಲು ಅನುವು ಮಾಡಿಕೊಡಲು ಎಸಿಬಿಯೊಂದಿಗೆ ಕೆಲಸ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು/ನಿಯೋಜಿಸಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಎಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ತಕ್ಷಣದಿಂದ ಜಾರಿಗೆ ಬರುವಂತೆ ಲೋಕಾಯುಕ್ತದ ಆಡಳಿತಾತ್ಮಕ ಮತ್ತು ವಿಶೇಷ ಶಿಸ್ತಿನ ನಿಯಂತ್ರಣಕ್ಕೆ ಬರಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

LEAVE A REPLY

Please enter your comment!
Please enter your name here