ವಿವೇಕಾನಂದ ಕಾಲೇಜಿಗೆ ʼಸ್ವಾಯತ್ತತೆ ಸ್ಥಾನಮಾನʼ ; ನಾಳೆ ರಾಜ್ಯಪಾಲರಿಂದ ಉದ್ಘಾಟನೆ

0

ಪುತ್ತೂರು: ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿಗೆ ಮಂಗಳೂರು ವಿಶ್ವವಿದ್ಯಾನಿಲಯು ಸ್ವಾಯತ್ತ ಸ್ಥಾನಮಾನವನ್ನು ನೀಡಿದ್ದು ಆ ಪ್ರಯುಕ್ತ ಉದ್ಘಾಟನಾ ಸಮಾರಂಭವು ಕಾಲೇಜಿನ ಕೇಶವ ಸಂಕಲ್ಪ ಸಭಾ ಭವನದಲ್ಲಿ ಆ .30ರಂದು ನೆರವೇರಲಿದೆ. ಕಾರ್‍ಯಕ್ರಮವನ್ನು  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದಾರೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಆ.30 ರಂದು ಬೆಳಗ್ಗೆ 10 ಗಂಟೆಗೆ ಸಮಾರಂಭ ನಡೆಯಲಿದ್ದು ರಾಜ್ಯಪಾಲರು ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹಸರಕಾರ್ಯವಾಹ ಮುಕುಂದ್ ಸಿ.ಆರ್, ಪುತ್ತೂರಿನ ಶಾಸಕ ಸಂಜೀವ ಮಠಂದೂರು ಹಾಗೂ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಶೈಕ್ಷಣಿಕ, ಸಾಂಸ್ಕೃತಿಕ, ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಅಮೋಘವಾಗಿ ಸಾಧನೆ ಮಾಡಿರುವ ವಿವೇಕಾನಂದ ಕಾಲೇಜನ್ನು ಸ್ವಾಯತ್ತ ಸಂಸ್ಥೆಯಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಅನೇಕ ಪ್ರಯತ್ನಗಳು ನಡೆದವು. ಅದರಂತೆಯೇ ನಿಯಮಾವಳಿಯ ಪ್ರಕಾರ ಮೇ ತಿಂಗಳಲ್ಲಿ ಯುಜಿಸಿ ತಜ್ಞರ ಸಮಿತಿ ಕಾಲೇಜಿಗೆ ಭೇಟಿ ನೀಡಿ ಅಧ್ಯಯನ ಮಾಡಿ ಇಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿ ಸ್ವಾಯತ್ತ ಮಾನ್ಯತೆಯನ್ನು ನೀಡಿದೆ. ಈ ಸ್ವಾಯತ್ತತೆಯ ಮಾನ್ಯತೆಯಿಂದ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಸಂಸ್ಥೆಗೆ ಹೆಚ್ಚಿನ ಅವಕಾಶ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿದ್ಯಾವರ್ಧಕ ಸಂಘದ ಕಾರ್‍ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್, ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್, ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣುಗಣಪತಿ ಭಟ್, ಐಕ್ಯೂಎಸಿ ಸಂಯೋಜಕ ಶಿವಪ್ರಸಾದ್ ಕೆ.ಎಸ್ ಹಾಗೂ ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಧರ ಎಚ್.ಜಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here