ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಸರಕಾರಿ ಪ್ರೌಢಶಾಲೆ ಇರ್ದೆ-ಉಪ್ಪಳಿಗೆ ಇದರ ಆಶ್ರಯದಲ್ಲಿ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಸೆ.12ರಂದು ಉಪ್ಪಳಿಗೆ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.
ಪಂದ್ಯಾಟವನ್ನು ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ವಿಠಲ ರೈ ಬೈಲಾಡಿ, ದೇರಣ್ಣ ರೈ ಪಾಪನಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ, ವಿಠಲ ರೈಯವರು, ಪಂದ್ಯಾಟದಲ್ಲಿ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿ ಗೆಲುವು ಸಾಧಿಸುವಂತೆ ಶುಭಹಾರೈಸಿದರು.
ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯಲ್ಲಿ ಪಂದ್ಯಾಟದಲ್ಲಿ ಭಾಗವಹಿಸಬೇಕು. ಛಲ, ಸಾಧನೆ ವಿದ್ಯಾರ್ಥಿಗಳಲ್ಲಿ ಪ್ರಮುಖವಾಗಿರಬೇಕು. ಪ್ರತಿಭೆಗಳಿಗೆ ಸರಕಾರ ಅವಕಾಶ ನೀಡುತ್ತಿದ್ದು ಸದುಪಯೋಗ ಪಡಿಸಿಕೊಳ್ಳಬೇಕು ಎಂದ ಅವರು, ಕ್ರೀಡಾ ಪ್ರತಿಭೆಗಳಿಗೆ ಉತ್ತಮ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತಾ.ಪಂ ಆಡಳಿತದ ನಮ್ಮ ಅತೀ ಹೆಚ್ಚು ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಲಾಗಿದೆ ಎಂದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ ಮಾತನಾಡಿ, ತಾಲೂಕು ಮಟ್ಟದಲ್ಲಿ ಗೆದ್ದ ತಂಡವು ಜಿಲ್ಲಾ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ವಿಜಯೀಯಾಗಿ ತಾಲೂಕಿಗೆ ಹೆಸರನ್ನು ತರಬೇಕು ಎಂದರು.
ಬೆಟ್ಟಂಪಾಡಿ ಗ್ರಾ.ಪಂ ಅಧ್ಯಕ್ಷೆ ಪವಿತ್ರ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಯೋಜಕ ಹರಿಪ್ರಸಾದ್, ಗ್ರೇಡ್1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸೀತಾರಾಮ ಗೌಡ ಹಿರೇಬಂಡಾಡಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸೀತಾರಾಮ ಗೌಡ ಮಿತ್ತಡ್ಕ, ಬೆಟ್ಟಂಪಾಡಿ ಗ್ರಾ.ಪಂ ಸದಸ್ಯ, ಶಾಲಾ ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ಪ್ರಕಾಶ್ ರೈ ಬೈಲಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಧ್ಯಾರ್ಥಿಗಳು ಪ್ರಾರ್ಥಿಸಿದರು. ಶಾಲಾ ಮುಖ್ಯ ಶಿಕ್ಷಕ ನಾರಾಯಣ ಕೆ. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ವಿದ್ಯಾ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕ ರಾಮಕೃಷ್ಣ ಪಡುಮಲೆ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಪಂದ್ಯಾಟ ನಡೆಯಿತು.