ಪುತ್ತೂರು:ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾಗಿರುವ ತಾ.ಪಂ.ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿಯವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.
ಈ ಹಿಂದೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಮಟ್ಟಾರು ರತ್ನಾಕರ ಹೆಗಡೆ ಅವರ ನಾಮನಿರ್ದೇಶನವನ್ನು ರದ್ದುಗೊಳಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಚನಿಲ ತಿಮ್ಮಪ್ಪ ಶೆಟ್ಟಿಯವರನ್ನು ಅಧ್ಯಕ್ಷರಾಗಿ ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಬಲ್ನಾಡು ಚನಿಲ ನಿವಾಸಿಯಾಗಿರುವ ಚನಿಲ ತಿಮ್ಮಪ್ಪ ಶೆಟ್ಟಿಯವರು ಬಿಜೆಪಿಯ ಸಕ್ರಿಯ ನಾಯಕರಾಗಿದ್ದು ಗ್ರಾಮ ಸಮಿತಿಯಿಂದ ಜಿಲ್ಲಾ ಸಮಿತಿಯ ತನಕ ಪಕ್ಷದಲ್ಲಿ ಅನ್ಯಾನ್ಯ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದವರು.ಡಿ.ವಿ.ಸದಾನಂದ ಗೌಡ ಅವರು ವಿಧಾನ ಸಭೆಗೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಂದರ್ಭದಲ್ಲಿಯೇ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ಬಿಜೆಪಿ ಗೆಲುವಿಗೆ ಕಾರಣಕರ್ತರಾಗಿದ್ದ ತಿಮ್ಮಪ್ಪ ಶೆಟ್ಟಿಯವರು ಒಟ್ಟು ಮೂರು ಬಾರಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ.ಪ್ರಸ್ತುತ ಶಾಸಕರಾಗಿರುವ ಸಂಜೀವ ಮಠಂದೂರು ಅವರು ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿರುವ ಸಂದರ್ಭದಲ್ಲೂ ಆರಂಭದಲ್ಲಿ ಚನಿಲ ತಿಮ್ಮಪ್ಪ ಶೆಟ್ಟಿಯವರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿದ್ದರು.ತಾ.ಪಂ ಅಧ್ಯಕ್ಷರಾಗಿ, ಅಂತರ್ರಾಜ್ಯ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಪ್ಕೋ ನಿರ್ದೇಶಕರಾಗಿ, ಎಸ್‌ಕೆಎಸಿಎಮ್‌ಎಸ್ ನಿರ್ದೇಶಕಾಗಿ, ಬಲ್ನಾಡು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.ಧಾರ್ಮಿಕ ಕ್ಷೇತ್ರದಲ್ಲೂ ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ಅವರು ಸುಮಾರು 26 ವರ್ಷಗಳ ಕಾಲ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದರು.ಬಳಿಕ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿಯೂ ಸೇವೆಗೈದ ಅವರು ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿಯೂ ಚನಿಲ ಸೇವೆ ಸಲ್ಲಿಸಿದ್ದರು.ಶೈಕ್ಷಣಿಕ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿರುವ ತಿಮ್ಮಪ್ಪ ಶೆಟ್ಟಿಯವರು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾಗಿ, ಪರ್ಲಡ್ಕ ಸರಕಾರಿ ಶಾಲೆಯ ಪುನರ್‌ನಿರ್ಮಾಣ ಸಮಿತಿ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ಇವರು ಪತ್ನಿ ಪ್ರೇಮಲತಾ ಟಿ ಶೆಟ್ಟಿ, ಪುತ್ರಿ ತೃಪ್ತಿ ಎಸ್ ಚೌಟ, ಅಳಿಯ ಸುಧೀಶ್ ಚೌಟ, ಪುತ್ರ ಪ್ರತೀಕ್ ಶೆಟ್ಟಿ ಅವರೊಂದಿಗೆ ಸುಖೀಜೀವನ ನಡೆಸುತ್ತಿದ್ದಾರೆ.ಪುತ್ರ ಪ್ರತೀಕ್ ಶೆಟ್ಟಿ ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್, ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಶಾಸಕರ ಶಿಫಾರಸ್ಸಿನ ಮೇರೆಗೆ ನನಗೆ ಈ ಜವಾಬ್ದಾರಿ ಲಭಿಸಿದೆ.ಮುಂದೆ ವಾರದೊಳಗೆ ಅಧಿಕಾರ ಸ್ವೀಕರಿಸಲಿದ್ದೇನೆ ಎಂದು ಚನಿಲ ತಿಮ್ಮಪ್ಪ ಶೆಟ್ಟಿಯವರು `ಸುದ್ದಿ’ಗೆ ತಿಳಿಸಿದ್ದಾರೆ.