ಪುತ್ತೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಪಾಪೆಮಜಲು ಸರಕಾರಿ ಪ್ರೌಢಶಾಲೆಯ ರಜತ ಸಂಭ್ರಮ ನ.12ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬೆಳಿಗ್ಗೆ 9ಕ್ಕೆ ಪುತ್ತೂರು ಶ್ರೀಮಾತಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಕುಲಾಲ್ ಧ್ವಜಾರೋಹಣ ನಡೆಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 9.30ರಿಂದ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಹಿರಿಯ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನ 12ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ರಜತ ಸಂಭ್ರಮ ಸಮಿತಿ ಅಧ್ಯಕ್ಷ ಸಚಿನ್ ಪಾಪೆಮಜಲು ಅಧ್ಯಕ್ಷತೆ ವಹಿಸಲಿದ್ದಾರೆ. ಅರಿಯಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಂತೋಷ್ ಮಣಿಯಾಣಿ ಬಹುಮಾನ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 1ರಿಂದ ಸಹಭೋಜನ ಬಳಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ರಜತ ಸಂಭ್ರಮ ಸಭಾ ಕಾರ್ಯಕ್ರಮ: ಸಂಜೆ 5ರಿಂದ ರಜತ ಸಂಭ್ರಮ ಸಭಾ ಕಾರ್ಯಕ್ರಮ ನಡೆಯಲಿದೆ. ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖಾ ಸಚಿವ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯ, ಪುತ್ತೂರು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭಾಗವಹಿಸಲಿದ್ದಾರೆ.
ಸನ್ಮಾನ: ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ನಡೆಯಲಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮಿನುಗಾರಿಕಾ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ ಎಸ್. ಸನ್ಮಾನಿಸಲಿದ್ದಾರೆ. ಎಸ್.ಡಿಎಂಸಿ ನಿಕಟಪೂರ್ವ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಡಿ.ಅಮ್ಮಣ್ಣ ರೈ ಪಾಪೆಮಜಲು, ಸುಬ್ರಾಯ ಮದ್ಲರವರನ್ನು ಸಂಸದ ನಳಿನ್ ಕುಮಾರ್ ಕಟೀಲು ಸನ್ಮಾನಿಸಲಿದ್ದಾರೆ. ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರವರು ಸನ್ಮಾನಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮ: ರಾತ್ರಿ 8ರಿಂದ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9.30ರಿಂದ ಚಾಪರ್ಕ ಕಲಾವಿದರಿಂದ ಕಾಪಿಕಾಡ್, ಬೋಳಾರ್, ವಾಮಂಜೂರು ಅಭಿನಯದಲ್ಲಿ ‘ನಾಯಿದ ಬೀಲ’ ನಾಟಕ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.