ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಸುಮಾರು 24 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಯುತ್ತಿದ್ದು ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚದಂತೆ ಕನ್ನಡಸೇನೆ ದ.ಕ.ಜಿಲ್ಲಾ ಸಮಿತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಮನವಿ ಮಾಡಲಾಗಿದೆ.
ನ.19ರಂದು ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯೊಳಗಿದ್ದ ದೇರೆಬೈಲ್ ಚರ್ಚ್ ಬಳಿ ಇರುವ ಹೋಲಿ ಫ್ಯಾಮಿಲಿ ಹಿರಿಯ ಪ್ರಾಥಮಿಕ ಶಾಲೆಯನ್ನು ಈಗಾಗಲೇ ಮುಚ್ಚಲಾಗಿದೆ. ಸದ್ರಿ ಶಾಲೆಯು ಕೂಡ ಸರಕಾರಿ ಕನ್ನಡ ಮಾಧ್ಯಮ ಶಾಲೆಯಾಗಿದ್ದು ಯಾವ ಕಾರಣಕ್ಕೆ ಮುಚ್ಚಲಾಗಿದೆ ಎನ್ನುವ ಬಗ್ಗೆ ಸಾರ್ವಜನಿಕರಿಗೆ ಸ್ಪಷ್ಟತೆ ಇಲ್ಲ. ಏಕಾಏಕಿ ಕನ್ನಡ ಮಾಧ್ಯಮ ಶಾಲೆಯನ್ನು ಮುಚ್ಚಿರುವುದರಿಂದ ಆ ಭಾಗದ ವಿದ್ಯಾರ್ಥಿಗಳಿಗೆ ಹಾಗೂ ಕನ್ನಡ ಅಭಿಮಾನಿಗಳಿಗೆ ಅಘಾತವಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಕನ್ನಡ ವಿರೋಧಿ ನಡೆಯಿಂದಾಗಿ ದಿನದಿಂದ ದಿನಕ್ಕೆ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಯತ್ನಗಳು ನಡೆಯುತ್ತಿದೆ. ಅಲ್ಲದೆ ಕೆಲವು ವರ್ಷಗಳಿಂದ ಉzಶಪೂರ್ವಕವಾಗಿ ಸರ್ಕಾರಿ ಕನ್ನಡ ಶಾಲೆಗಳಿಗೆ ಅಗತ್ಯವಿರುವಷ್ಟು ಶಿಕ್ಷಕರನ್ನು ನೇಮಕ ಮಾಡದ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅವಮಾನ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ವ್ಯವಸ್ಥಿತವಾಗಿ ಮುಚ್ಚುವಂತಹ ಷಡ್ಯಂತ್ರ ನಡೆಯುತ್ತಿವೆ. ಆದುದರಿಂದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.