ಕೃಷಿ ಇಲಾಖೆ ಸವಲತ್ತುಗಳು ಫಲಾನುಭವಿಗಳಿಗೆ ತಲುಪುತ್ತಿಲ್ಲ: ಆರೋಪ
ಕಡಬ: ಕಡ್ಯ ಕೊಣಾಜೆ ಗ್ರಾಮದ ಕೊಣಾಜೆ ಶ್ರೀ ದುರ್ಗಾಂಬಿಕಾ ಭಜನಾ ಮಂದಿರ ಸಭಾಭವನದಲ್ಲಿ ಕಡಬ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು.
ಕಡಬ ತಹಶೀಲ್ದಾರ್ ರಮೇಶ್ ಬಾಬು ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಇಲಾಖೆಯಿಂದ ಸರಕಾರದ ಸವಲತ್ತುಗಳು ಸಮರ್ಪಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂದು ಸಭೆಯಲ್ಲಿ ಗ್ರಾಮಸ್ಥರು ಆರೋಪಿಸಿದರು. ಉತ್ತರಿಸಿದ ಅಧಿಕಾರಿಗಳು ನಾವು ಸವಲತ್ತುಗಳನ್ನು ಆದ್ಯತೆ ನೆಲೆಯಲ್ಲಿ ವಿತರಿಸುತ್ತಿದ್ದೆವೆ ಎಂದರು. ಟಾರ್ಪಲ್ ವಿತರಣೆಯಲ್ಲಿ ಭತ್ತದ ಕೃಷಿಕರಿಗೆ ಪ್ರಥಮ ಆದ್ಯತೆ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದರು.
ಗ್ರಾಮದಲ್ಲಿ ನಿರಂತರವಾಗಿ ಕಾಡಾನೆ ಹಾವಳಿ ಇಡುತ್ತಿದೆ. ಕೃಷಿ ತೋಟಗಳಿಗೆ ಹಾನಿ ಮಾಡುತ್ತಿದೆ. ಜನತೆ ಸಮಸ್ಯೆ ಎದುರಿಸುತ್ತಿದ್ದಾರೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರದ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದರು. ಸೋಲಾರ್ ಬೇಲಿ ಅಳವಡಿಸಲು ಅವಕಾಶ ಇದೆ ಎಂದು ಅಧಿಕಾರಿಗಳು ತಿಳಿಸಿದರು. ಗ್ರಾಮದ ವಿವಿಧ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಸಭೆಯಲ್ಲಿ ಪ್ರಸ್ತಾಪಿಸಿದರು. ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಸ್ಥಳೀಯಾಡಳಿತ ಅಧಿಕಾರಿಗಳು, ಸಿಬ್ಬಂದಿಗಳು, ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು. ಸರಕಾರದ ವಿವಿಧ ಸವಲತ್ತುಗಳನ್ನುಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ವಿತರಿಸಲಾಯಿತು. ಉಪತಹಶೀಲ್ದಾರ್ ಗೋಪಾಲ ಕಲ್ಲುಗುಡ್ಡೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.