ಜ.22ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಕಾರ್ಯಕ್ರಮ; ಸಾವಿರಾರು ಮಂದಿಯ ಸಮ್ಮುಖದಲ್ಲಿ ಅಶೋಕ್ ರೈ ಕಾಂಗ್ರೆಸ್ ಸೇರ್ಪಡೆ

0

ಪುತ್ತೂರು: ಬಿಜೆಪಿಯ ಜಿಲ್ಲಾ ಕಾರ್ಯಕಾರಿಣಿಯ ಸದಸ್ಯರೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರೂ ಆಗಿದ್ದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಜ.22ರಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.


ಮಂಗಳೂರಿನ ನೆಹರೂ ಮೈದಾನದಲ್ಲಿ ಜ.22ರಂದು ಅಪರಾಹ್ನ ನಡೆಯಲಿರುವ ಕಾಂಗ್ರೆಸ್‌ನ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್ ರೈಯವರು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿರುವ ಮಾಜಿ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವು ನಾಯಕರು ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಂಗಳೂರಿನಲ್ಲಿ ನಡೆಯುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ 50 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ವಿವಿಧ ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ರೂವಾರಿಗಳೂ, ಕಂಬಳ ಮತ್ತು ಅಡಿಕೆ ಬೆಳೆಗಾರರ ಪರ ಹೋರಾಟಗಾರರೂ ಆಗಿರುವ ಉದ್ಯಮಿ ಅಶೋಕ್ ರೈಯವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹಲವು ದಿನಗಳಿಂದ ಸುದ್ದಿಯಾಗಿತ್ತು. ಇದೀಗ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್‌ನ ಬೃಹತ್ ಸಮಾವೇಶದಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಪುತ್ತೂರಿನಿಂದ ಬಸ್, ವಿವಿಧ ವಾಹನ ಸೇರಿದಂತೆ 150ಕ್ಕೂ ಅಧಿಕ ವಾಹನಗಳಲ್ಲಿ ಅಶೋಕ್ ಕುಮಾರ್ ರೈ ಅಭಿಮಾನಿ ಬಳಗದವರು ಕಾಂಗ್ರೆಸ್ ಕಾರ್ಯಕ್ರಮಕ್ಕೆ ತೆರಳಲಿದ್ದು ಅಶೋಕ್ ರೈಯವರ ರಾಜಕೀಯ ಜೀವನದ ಎರಡನೇ ಇನ್ನಿಂಗ್ಸ್‌ಗೆ ಸಾಕ್ಷಿಯಾಗಲಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿರುವಾಗಲೇ ರಾಜಕೀಯ ಕ್ಷೇತ್ರದಲ್ಲಿ ಹಲವು ಮಹತ್ತರ ಬೆಳವಣಿಗೆಗಳಾಗುತ್ತಿದೆ. ಪಕ್ಷಾಂತರ ಪರ್ವ ಆರಂಭಗೊಂಡಿದೆ. ಇದೇ ಸಮಯದಲ್ಲಿ ಅಶೋಕ್ ಕುಮಾರ್ ರೈಯವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಠಿಸಿದೆ.

LEAVE A REPLY

Please enter your comment!
Please enter your name here