ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಿರತರಾಗಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪೊಲೀಸ್ ವಶಕ್ಕೆ

0

ಬೆಂಗಳೂರು:‘ಅಂಗನವಾಡಿ ಕಾರ್ಯಕರ್ತೆಯರಿಗೆ ಶಿಕ್ಷಕರ ಸ್ಥಾನಮಾನ ನೀಡಬೇಕು’ ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುತ್ತೂರು, ಕಡಬದ ನೂರಾರು ಕಾರ್ಯಕರ್ತೆಯರು, ಸಹಾಯಕಿಯರೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.


ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರವನ್ನು ಆಗ್ರಹಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೇತೃತ್ವದಲ್ಲಿ ನಡೆಯುತ್ತಿದ್ದ ಅನಿರ್ಧಿಷ್ಟ ಪ್ರತಿಭಟನೆ ಶುಕ್ರವಾರ ಮೂರನೇ ದಿನ ಪೂರೈಸಿದೆ.

ಸ್ಥಳದಿಂದ ತೆರಳಲು ಪೊಲೀಸರ ಕೋರಿಕೆ: ಜ.20ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪಾಲ್ಗೊಂಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು, ನಿಮಗೆ ಪ್ರತಿಭಟನೆಗೆ ನೀಡಿದ್ದ ಕಾಲಾವಕಾಶ ಮುಗಿದಿದೆ ಎಂದು ಹೇಳಿ, ಸ್ಥಳದಿಂದ ಹೋಗುವಂತೆ ಕೋರಿದರು. ಆದರೆ ಅದಕ್ಕೆ ಪ್ರತಿಭಟನಾಕಾರರು ಅದಕ್ಕೆ ಒಪ್ಪಲಿಲ್ಲ. ಬಳಿಕ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಪೊಲೀಸರು ವಶಕ್ಕೆಪಡೆದು, ಬಸ್‌ಗಳಲ್ಲಿ ಕರೆದೊಯ್ದಿದ್ದಾರೆ. ಪುತ್ತೂರು ಮತ್ತು ಕಡಬದ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಸುಮಾರು 300 ಕಾರ್ಯಕರ್ತೆಯರು, ಸಹಾಯಕಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ಉದ್ಯಾನದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರು.

ಸಚಿವರ ಆಗಮನ-ಸಿಎಂ ಅವರೇ ಬರಲಿ-ಆಗ್ರಹ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರು ಜ.19ರಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾನಿರತರ ಮನವಿ ಸ್ವೀಕರಿಸಿದ್ದರು. ‘ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು. ಸದ್ಯ ಪ್ರತಿಭಟನೆ ಕೈಬಿಡಿ’ ಎಂದು ಸಚಿವರು ಕೋರಿದ್ದರು. ಆದರೆ ಅದಕ್ಕೆ ಒಪ್ಪದ ಪ್ರತಿಭಟನಾಕಾರರು, ‘ಮುಖ್ಯಮಂತ್ರಿಯವರು ಪ್ರತಿಭಟನಾ ಸ್ಥಳಕ್ಕೆ ಬರಬೇಕು. ನಮ್ಮ ಬೇಡಿಕೆಗಳನ್ನು ಆಲಿಸಿ, ಅವುಗಳನ್ನು ಈಡೇರಿಸಲು ಲಿಖಿತ ಭರವಸೆ ನೀಡಬೇಕು. ಅಲ್ಲಿಯವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ’ ಎಂದು ಪಟ್ಟು ಹಿಡಿದರು.

LEAVE A REPLY

Please enter your comment!
Please enter your name here