ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ವೈಭವದ ರಥೋತ್ಸವ

0

ವಿಟ್ಲ: ಇತಿಹಾಸ ಪ್ರಸಿದ್ದ ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ಜ.21ರಂದು ರಾತ್ರಿ ಸಂಭ್ರಮ ಸಡಗರದಿಂದ ನಡೆಯಿತು. ರಾತ್ರಿ ಕಡಂಬುವಿನಿಂದ ಕೊಡಮಣಿತ್ತಾಯ ದೈವದ ಭಂಡಾರ ಕ್ಷೇತ್ರಕ್ಕೆ ಆಗಮಿಸಿದ ಬಳಿಕ ರಥೋತ್ಸವ ಆರಂಭಗೊಂಡಿತು. ಈ ವೇಳೆ ಆಕರ್ಷಕ ಸಿಡಿಮದ್ದು ಪ್ರದರ್ಶನ ನಡೆಯಿತು. ಊರ ಪರವೂರ ಸಾವಿರಾರು ಭಕ್ತಾದಿಗಳು ರಥೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು. ರಥೋತ್ಸವದ ಬಳಿಕ ದೇವರ ಬೀದಿ ಮೆರವಣಿಗೆ, ಶಯನೋತ್ಸವ ನಡೆಯಿತು.

ಬೆಳಿಗ್ಗೆ ಕ್ಷೇತ್ರದಲ್ಲಿ ದರ್ಶನ ಬಲಿ, ರಾಜಾಂಗಣದ ಬಟ್ಟಲು ಕಾಣಿಕೆ ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಿತು. ನೂರಾರು ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು.

ಹರಿದುಬಂದ ಭಕ್ತಸಮೂಹ:

ವಿಟ್ಲ ಶ್ರೀ ಪಂಚ ಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಊರ-ಪರವೂರಿನ ಸಾವಿರಾರು ಭಕ್ತಾದಿಗಳು ಬೆಳಿಗ್ಗಿನಿಂದಲೇ ದೇವಾಲಯಕ್ಕೆ ಆಗಮಿಸಲಾರಂಭಿಸಿದರು. ಮುಖ್ಯರಸ್ತೆಯಿಂದ ದೇವಾಲಯಕ್ಕೆ ತೆರಳುವ ಎಲ್ಲಾ ಒಳರಸ್ತೆಯಲ್ಲಿ ಬೆಳಿಗ್ಗಿನಿಂದಲೇ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು.

ಎಲ್ಲೆಡೆ ಪೊಲೀಸ್ ಸರ್ಪಗಾವಲು:

 ವಿಟ್ಲ ರಥೋತ್ಸವದ ಪ್ರಯುಕ್ತ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ರವರ ನೇತೃತ್ವದಲ್ಲಿ ಬಂದೋಬಸ್ತ್ ಗಾಗಿ ವಿವಿಧ ಕಡೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಸಲಾಗಿತ್ತು. ದೇವಾಲಯದ ಜಾತ್ರಾ ಗದ್ದೆ ಸಹಿತ ಸುತ್ತಮುತ್ತಲಿನ ಪ್ರದೇಶದಲ್ಲಿ ವಿಶೇಷ ಬಂದೋಬಸ್ತು ಏರ್ಪಡಿಸಲಾಗಿತ್ತು. ಅಹಿತಕರ ಘಟನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಕಳ್ಳರ ಹಾವಳಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸರು ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ದೇವಸ್ಥಾನದ ಸಮೀಪ ಸಾರ್ವಜನಿಕರಿಗೆ ಸಹಾಯವಾಗಲೆಂದು ಪೊಲೀಸ್ ಔಟ್‌ಪೋಸ್ಟ್ ತೆರೆಯಲಾಗಿತ್ತು.

LEAVE A REPLY

Please enter your comment!
Please enter your name here