ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ಅಂಗನವಾಡಿಗಳಲ್ಲಿ ಶಿಕ್ಷಣ-ಸರ್ಕಾರದ ಸುತ್ತೋಲೆ

0

ಪುತ್ತೂರು:ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಇನ್ನು ಮುಂದೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಶಿಕ್ಷಣ ನೀಡುವಂತೆ, ಶಿಕ್ಷಣ ನೀಡುವ ಅವಧಿಯನ್ನು ಸೀಮಿತಗೊಳಿಸಿ ಸರ್ಕಾರವು ಸುತ್ತೋಲೆ ಹೊರಡಿಸಿದೆ.

2011ರಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ನೀಡುವ ಶಿಕ್ಷಣ ಅವಧಿಯನ್ನು ಬೆಳಗ್ಗೆ 9.30ರಿಂದ ಸಂಜೆ 4 ಗಂಟೆವರೆಗೆ ನಡೆಸುವಂತೆ ಆದೇಶಿಸಲಾಗಿತ್ತು.ಇದನ್ನು ಬದಲಿಸಿ ಶಿಕ್ಷಣ ಅವಧಿಯನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಸಲು ಸಮಯ ನಿಗದಿ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.

ಶಿಕ್ಷಣ ನೀಡುವ ಅವಧಿಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಪೋಷಕರು, ಸಾರ್ವಜನಿಕರು, ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದ ರೀತಿಯಲ್ಲಿ ಭೇಟಿಯಾಗಬೇಕು. ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಫಲಾನುಭವಿಗಳು ಮತ್ತು ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಯ ಪೋಷಕರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾದರೆ ಅಥವಾ ಚರ್ಚೆ ನಡೆಸಬೇಕಾದರೆ ಮಧ್ಯಾಹ್ನ 2 ಗಂಟೆಯ ನಂತರ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಬೇಕು. ಈ ಸೂಚನೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಬೇಡಿಕೆ ಈಡೇರಿಕೆ

ಅಂಗನವಾಡಿಗಳಲ್ಲಿ, ಶಾಲಾ ಪೂರ್ವ ಅವಧಿಯನ್ನು ಬೆಳಗ್ಗೆ 9.30ರಿಂದ ಸಂಜೆ 4ರವರೆಗೆ ಇರುವುದನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದರು.ಈ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಶಿಕ್ಷಣದ ಅವಧಿಯನ್ನು ಕಡಿಮೆ ಮಾಡಿದೆ.

LEAVE A REPLY

Please enter your comment!
Please enter your name here