ಉಪ್ಪಿನಂಗಡಿ: ಮಾದರಿ ಶಾಲೆಯಲ್ಲಿ ಕಲಿಕಾ ಹಬ್ಬ

0

ಉಪ್ಪಿನಂಗಡಿ: ಸರಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸುವಲ್ಲಿ ಸರಕಾರ ವಿಶೇಷ ಆಸಕ್ತಿಯನ್ನು ವಹಿಸಿದ್ದು, ಸರಕಾರಿ ಶಾಲಾ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯುವಂತಾಗಲು ಸ್ಮಾರ್ಟ್ ಕ್ಲಾಸ್ ಗಳನ್ನು ಹಾಗೂ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಒದಗಿಸಲಾಗಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ತಿಳಿಸಿದರು.

ಉಪ್ಪಿನಂಗಡಿಯ ಸರಕಾರಿ ಮಾದರಿ ಶಾಲೆಯಲ್ಲಿ ನಡೆದ ಉಪ್ಪಿನಂಗಡಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಖಾಸಗಿ ಶಾಲೆಗಳಲ್ಲಿ ಇರುವಂತೆಯೇ ಸರಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ವ್ಯವಸ್ಥೆಯ ಕಲಿಕಾ ಸೌಲಭ್ಯಗಳನ್ನು ಒದಗಿಸಿ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಉನ್ನತೀಕರಣಗೊಳಿಸಲು ಗಮನ ಹರಿಸಲಾಗಿದೆ. ಪುತ್ತೂರು ತಾಲೂಕಿನ 111 ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕವನ್ನು ಹಾಗೂ 215 ಅಂಗನವಾಡಿ ಕೇಂದ್ರಗಳಿಗೆ ಶುದ್ದ ಕುಡಿಯುವ ನೀರಿನ ಘಟಕವನ್ನು ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷೆ ಉಷಾಚಂದ್ರ ಮುಳಿಯ, ಈ ದಿನ ಶಾಲೆಯಲ್ಲಿ ವಾರ್ಷಿಕೋತ್ಸವದ ಸಂಭ್ರಮವಿದೆ. ನಾಲ್ಕು ಗೋಡೆಗಳ ಮಧ್ಯೆ ನೀಡುವ ಶಿಕ್ಷಣಕ್ಕಿಂತ ಇಂತಹ ಕ್ರಿಯಾತ್ಮಕ ಕಾರ್ಯಕ್ರಮಗಳಿಂದ ಮಕ್ಕಳ ಮನಸ್ಸು ಹೆಚ್ಚು ಚೈತನ್ಯ ಶೀಲವಾಗಲಿದೆ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ನವೀನ್ ವೇಗಸ್ ಮಾತನಾಡಿ, ಕಲಿಕೆಯೆಂಬುದು ಕಷ್ಟಪಟ್ಟಲ್ಲ ಇಷ್ಟಪಟ್ಟು ಆಗಬೇಕು. ಒತ್ತಡದಿಂದ ಕಲಿಕೆ ಸಾಧ್ಯವಿಲ್ಲ. ಶಿಕ್ಷೆಯಿಲ್ಲದೆ ಆಟದ ಮೂಲಕ ಮಕ್ಕಳಿಗೆ ಶಿಕ್ಷಣ ನೀಡುವ ಕೆಲಸಗಳಾದಾಗ ಮಗುವಿನ ಅರ್ಥೈಸುವಿಕೆಯ ವೇಗ ಹೆಚ್ಚಾಗಲು ಸಾಧ್ಯವಿದೆ ಎಂದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯಕುಮಾರ್ ಕಲ್ಲಳಿಕೆ, ಉಪಾಧ್ಯಕ್ಷ ಅಬ್ದುರ್ರಹ್ಮಾನ್ ಯುನಿಕ್, ಮಾಜಿ ಅಧ್ಯಕ್ಷ ಚಂದ್ರಶೇಖರ, ಶಾಲಾ ದಾನಿ ಜತೀಂದ್ರ ಶೆಟ್ಟಿ ಎ., ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ವಿಜಯಕುಮಾರ್, ಉಪಾಧ್ಯಕ್ಷೆ ಲಲಿತಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯ ಸಂತೋಷ್ ನಾಯ್ಕ್, ಹಿರೇಬಂಡಾಡಿ ಪ್ರೌಢಶಾಲಾ ಮುಖ್ಯಗುರು ವೇದಾವತಿ, ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಗುರು ಶ್ರೀಧರ ಭಟ್, ನಿವೃತ್ತ ಮುಖ್ಯಗುರು ದೇವಕಿ ಉಪಸ್ಥಿತರಿದ್ದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರವಿಚಂದ್ರ ಶಾಂತಿ ಅಧ್ಯಕ್ಷತೆ ವಹಿಸಿದ್ದರು.

ಸಿಆರ್‌ಪಿ ಅಶ್ರಫ್ ಸ್ವಾಗತಿಸಿದರು. ಶಾಲಾ ಮುಖ್ಯಗುರು ಹನುಮಂತಯ್ಯ ವಂದಿಸಿದರು. ಶಿಕ್ಷಕಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮೊದಲು ವಿದ್ಯಾರ್ಥಿಗಳಿಂದ ಆಕರ್ಷಕ ಮೆರವಣಿಗೆ ನಡೆಯಿತು.

LEAVE A REPLY

Please enter your comment!
Please enter your name here