ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭ
ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಬೊಮ್ಮಾಯಿ ಆಗಮನ

0

ಪುತ್ತೂರು: ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಮತ್ತು ದೇಶದ ಪ್ರಥಮ ಸಹಕಾರಿ ಸಚಿವರಾಗಿರುವ ಅಮಿತ್ ಶಾ ಅವರು ಫೆ.11ರಂದು ಅಪರಾಹ್ನ 4.10ಕ್ಕೆ ತೆಂಕಿಲಕ್ಕೆ ಆಗಮಿಸಿದರು.ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷ ಶಂಕರನಾರಾಯಣ ಖಂಡಿಗ, ವ್ಯವಸ್ಥಾಪಕ ನಿರ್ದೇಶಕ ಹೆಚ್.ಎಂ.ಕೃಷ್ಣಕುಮಾರ್ ಮತ್ತು ಆಡಳಿತ ಮಂಡಳಿ ನಿರ್ದೇಶಕರು ಸಚಿವರನ್ನು ಸ್ವಾಗತಿಸಿ ಬರಮಾಡಿಕೊಂಡರು. ತೆಂಕಿಲ ವಿವೇಕಾನಂದ ಶಾಲಾ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯುತ್ತಿದ್ದು ಅಮಿತ್ ಶಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ದ.ಕ.ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರೂ ಜೊತೆಗಿದ್ದರು. ಹನುಮಗಿರಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್‌ನಲ್ಲಿ ಹೊರಟು ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ನಲ್ಲಿ ಬಂದಿಳಿದ ಅಮಿತ್ ಶಾ ಅವರು ಅಲ್ಲಿಂದ ಕಾರಲ್ಲಿ ರಸ್ತೆ ಮಾರ್ಗವಾಗಿ ಮುಕ್ರಂಪಾಡಿ-ಬೈಪಾಸ್ ರಸ್ತೆ ಮೂಲಕ ತೆಂಕಿಲಕ್ಕೆ ಆಗಮಿಸಿದರು. ಈ ಸಂದರ್ಭ ರಸ್ತೆಯಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಕ್ಯಾಂಪ್ಕೋದ ವಿವಿಧ ಯೋಜನೆಗಳಿಗೆ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ. ರಾಜ್ಯ ಗೃಹಸಚಿವ ಅಗರ ಜ್ಞಾನೇಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌, ಬಂದರು ಮೀನುಗಾರಿಕೆ ಸಚಿವ ಎಸ್‌ ಅಂಗಾರ, ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್‌, ಶಾಸಕರಾದ ಸಂಜೀವ ಮಠಂದೂರು, ಹರೀಶ್‌ ಪೂಂಜ, ರಾಜೇಶ್‌ ನಾಯ್ಕ್‌ ಉಳಿಪ್ಪಾಡಿಗುತ್ತು ಸಹಿತ ವಿವಿಧ ಜನಪ್ರತಿನಿಧಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದಾರೆ.

LEAVE A REPLY

Please enter your comment!
Please enter your name here