ಪುತ್ತೂರು: ಶಾಂತಿಗೋಡು ಗ್ರಾಮದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ, ದೇವರ ದರ್ಶನ ಬಲಿ ಬಟ್ಟಲು ಕಾಣಿಕೆ ಫೆ.15ರಂದು ನಡೆಯಿತು.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆದ ಜಾತ್ರೋತ್ಸವದಲ್ಲಿ ಫೆ.15ರಂದು ರಾತ್ರಿ ದೇವರಿಗೆ ರಂಗಪೂಜೆಯೊಂದಿಗೆ ಜಾತ್ರೋತ್ಸವಕ್ಕೆ ಚಾಲನೆ ದೊರೆಯಿತು. ಫೆ.16 ರಂದು ಪೂರ್ವಾಹ್ನ ಗಣಹೋಮ, ಸೀಯಾಳಾಭಿಷೇಕ, ಪವಮಾನಾಭಿಷೇಕ, ನವಕ ಕಲಶಾಭಿಷೇಕ, ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ಭಜನಾ ಮಂಡಳಿಯವರಿಂದ ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಸಂಜೆ ದೈವಗಳ ಭಂಡಾರ ತೆಗೆದ ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಜರುಗಿತು. ಸಾಂಸ್ಕೃತಿಕ ಕಾರ್ಯಕ್ರಮವನ್ನು ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯ ಮುಖ್ಯಗುರು ಜಯಮಾಲ ವಿ.ಎನ್., ವಿಶ್ವಸ್ಥ ಮಂಡಳಿ ಅಧ್ಯಕ್ಷ ಉಮೇಶ್ ಕೋಡಿಬೈಲು ಉಪಸ್ಥಿತರಿದ್ದರು.
ರಾತ್ರಿ ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ, ಉಳ್ಳಾಕುಲು, ಹುಲಿಭೂತ, ಕೊಡಮಣಿತ್ತಾಯ, ಅಂಙಣ ಪಂಜುರ್ಲಿ ದೈವಗಳ ನೇಮ, ಫೆ.17ರಂದು ಬೆಳಿಗ್ಗೆ ಶ್ರೀರಕ್ತೇಶ್ವರಿ, ಶಿರಾಡಿ ರಾಜನ್ ದೈವ, ಗುಳಿಗ ದೈವಗಳ ನೇಮ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ವಿಶ್ವಸ್ಥ ಮಂಡಳಿ ಅಧ್ಯಕ್ಷ ಸದಸ್ಯರು ಸೇರಿದಂತೆ ಸಾವಿರಾರು ಮಂದಿ ಭಕ್ತಾದಿಗಳು ಪಾಲ್ಗೊಂಡು ಜಾತ್ರೋತ್ಸವದ ಸಂಭ್ರಮವನ್ನು ಕಣ್ತುಂಬಿಕೊಂಡರು.