ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.1 ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ-ಪುತ್ತೂರಿನಿಂದ ಬೆಂಬಲ

0

ಪುತ್ತೂರು: ಶೇ.40ರಷ್ಟು ಫಿಟ್‌ಮೆಂಟ್ ನೀಡಬೇಕು ಮತ್ತು ಹೊಸ ಪಿಂಚಣಿ ಯೋಜನೆ(ಎನ್‌ಪಿಎಸ್) ಬದಲು ಹಳೆ ಪಿಂಚಣಿ ಯೋಜನೆ(ಒಪಿಎಸ್)ಯ ಜಾರಿಗೆ ಆಗ್ರಹಿಸಿ ಮಾ.1 ರಿಂದ ರಾಜ್ಯದ ಎಲ್ಲಾ ಸರಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರ ಹೂಡುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಷಡಕ್ಷರಿರವರು ಈಗಾಗಲೇ ಕರೆಯನ್ನು ಹೊರಡಿಸಿರುತ್ತಾರೆ.

ಎಸ್.ಷಡಕ್ಷರಿರವರ ಕರೆಯ ಹಿನ್ನೆಲೆಯಲ್ಲಿ ಪುತ್ತೂರು ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯರವರ ನೇತೃತ್ವದಲ್ಲಿ ಫೆ.24 ರಂದು ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ತುರ್ತು ಸಭೆಯನ್ನು ಕರೆದಿರುವ ಹಿನ್ನೆಲೆಯಲ್ಲಿ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಅಲ್ಲದೆ ವೃಂದ ಸಂಘಗಳ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳ ಸಭೆ ನಡೆಸಿ ಸರಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಪೂರ್ಣ ಬೆಂಬಲ ನೀಡುವುದೆಂದು ಘೋಷಿಸಲಾಯಿತು.

ಆದ್ದರಿಂದ ಮಾರ್ಚ್ 1 ರಿಂದ ಸರಕಾರಿ ನೌಕರರು ತಮ್ಮ ನ್ಯಾಯಯುತ ಬೇಡಿಕೆಗಾಗಿ ಹೋರಾಟ ನಡೆಸಲಾಗುತ್ತಿದ್ದು, ಯಾವುದೇ ಸರಕಾರಿ ಕಛೇರಿಗಳು, ಶಾಲಾ-ಕಾಲೇಜುಗಳು ತೆರೆಯದೆ ಭವಿಷ್ಯದ ಬದುಕಿಗಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವುದೆಂದು ಸಭೆಯಲ್ಲಿ ನಿರ್ಧರಿಸಲಾಯಿತು. ಈ ತುರ್ತು ಸಭೆಯಲ್ಲಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಅಬ್ರಹಾಂ ಎಸ್.ಎ, ರಾಜ್ಯ ಪರಿಷತ್ ಸದಸ್ಯ ಪುರುಷೋತ್ತಮ್ ಬಿ, ಹಿರಿಯ ಉಪಾಧ್ಯಕ್ಷ ಹರಿಪ್ರಕಾಶ್ ಬೈಲಾಡಿ ಸಹಿತ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here