ಪತ್ರಿಕಾಗೋಷ್ಟಿಯಲ್ಲಿ ತಾ|ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ ಕರೆ
ಪುತ್ತೂರು: ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರಕಾರವನ್ನು ಆಗ್ರಹಿಸಿ ಮಾರ್ಚ್ ಒಂದರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಸರಕಾರಿ ನೌಕರರ ಸಂಘದ ಎಸ್.ಷಡಕ್ಷರಿರವರು ಕರೆಯನ್ನು ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ, ಜಿಲ್ಲೆಯ, ತಾಲೂಕಿನ ಸಮಸ್ತ ಸರಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲವನ್ನು ನೀಡಲಿದ್ದೇವೆ ಎಂದು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯರವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಫೆ.24 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಾನಂದ ಆಚಾರ್ಯರವರು, ಫೆ.21 ರಂದು ಜರಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ, ತಾಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳ `ತುರ್ತು ರಾಜ್ಯ ಕಾರ್ಯಕಾರಿಣಿ ಸಭೆ’ಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಗಳನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಿಸುವ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರ ಕರೆಯಂತೆ ಈ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳಲಾಗಿದೆ ಎಂದರು.
ಮುಂದುವರೆದು ಮಾತನಾಡಿದ ಅಧ್ಯಕ್ಷ ಶಿವಾನಂದ ಆಚಾರ್ಯರವರು, ರಾಜ್ಯದ ೨೦೨೩-೨೪ನೇ ಸಾಲಿನ ಆಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸಹಜವಾಗಿಯೇ ನೌಕರರಲ್ಲಿ ನಿರಾಶೆ ಮೂಡಿಸಿದೆ. ರಾಜ್ಯ ಸರಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು 2022,ಜುಲೈ 1ರಂದು ಜಾರಿಗೊಳಿಸಲಾಗಿತ್ತು. ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರವು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿಗಳದ ಸುಧಾಕರ್ ರಾವ್‌ರವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿದ್ದು, ಆಯೋಗದ ಮುಂದೆ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಸ್ತೃತ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಿತ್ತು ಎಂದರು.
ತಾಲೂಕು ಸರಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಅಬ್ರಹಾಂ ಎಸ್.ಎ ಮಾತನಾಡಿ, ರಾಜ್ಯ ಸರಕಾರದ ಅಧಿಕಾರಿ-ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲ-ಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯ ಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದಾಗ್ಯೂ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಭೆಯು ಒಕ್ಕೊರಲಿನಿಂದ ಅಸಮ್ಮತಿ ವ್ಯಕ್ತಪಡಿಸಿ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಿ ಈ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುತ್ತದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ರಾಜ್ಯ ಪರಿಷತ್ ಸದಸ್ಯ ಪುರುಷೋತ್ತಮ್ ಬಿ, ಹಿರಿಯ ಉಪಾಧ್ಯಕ್ಷ ಹರಿಪ್ರಕಾಶ್ ಬೈಲಾಡಿ, ಉಪಾಧ್ಯಕ್ಷ ಹೊನ್ನಪ್ಪ ಗೌಡರವರು ಉಪಸ್ಥಿತರಿದ್ದರು.
ಸಂಘದ ಪ್ರಮುಖ ಬೇಡಿಕೆಗಳು…
-ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ೨೦೨೨, ಜುಲೈ ೧ ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, ೬ನೇ ವೇತನ ಆಯೋಗದ ಮಾದರಿಯಂತೆ ೭ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು ಚುನಾವಣೆ ನೀತಿ-ಸಂಹಿತೆ ಜಾರಿಗೆ ಮೊದಲು ಶೇ.೪೦ ಫಿಟ್‌ಮೆಂಟ್ ಸೌಲಭ್ಯವನ್ನು ೨೦೨೨, ಜುಲೈ ೧ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು.
-ರಾಜ್ಯದ ಎನ್‌ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್‌ಪಿಎಸ್ ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಘಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್‌ಪಿಎಸ್ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.