ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

0

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಮಹಿಳಾ ಘಟಕದ ವತಿಯಿಂದ ಅಧಿವಕ್ತ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತ ಹಾಗೂ ಅಧಿವಕ್ತ ಪರಿಷದ್ ಪುತ್ತೂರು ಘಟಕದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಧನೇಶ್ವರಿ ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರು ಪುರುಷರಷ್ಟೇ ಸಮಾನರು. ಅವರಿಲ್ಲದ ಕ್ಷೇತ್ರವಿಲ್ಲ, ಅವರು ಮಾಡದ ಸಾಧನೆ ಇಲ್ಲ. ತೊಟ್ಟಿಲನ್ನು ತೂಗುವ ಕೈ ಇಂದು ಜಗತ್ತನ್ನೇ ಆಳುತ್ತಿದೆ. ಸಣ್ಣ ಪದವಿ, ಕೆಲಸ, ಮನೆಗೆಲಸದಿಂದ ಹಿಡಿದು ಅತ್ಯುತ್ತಮ ಪದವಿಯವರೆಗೂ ಮಹಿಳೆ ಸ್ಥಾನ ಪಡೆದುಕೊಂಡಿದ್ದಾಳೆ. ಓರ್ವ ಮಹಿಳೆ ತನ್ನ ಜೀವನದ ವಿವಿಧ ಹಂತಗಳಲ್ಲಿ ಹಲವಾರು ಪಾತ್ರಗಳನ್ನು ನಿರ್ವಹಿಸುತ್ತಿದ್ದಾಳೆ ಎಂದು ಹೇಳಿದರು. ಜೊತೆಗೆ ಈ ದಿನದ ಆಚರಣೆಯ ಮುಖ್ಯ ಉದ್ದೇಶ ಲಿಂಗ ಸಮಾನತೆಯನ್ನು ಎತ್ತಿಹಿಡಿಯುವುದು ಹಾಗೂ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುವುದಾಗಿದೆ. ಹೀಗಾಗಿ ಕೇವಲ ಒಂದು ದಿನಕ್ಕೆ ಈ ಸಂಭ್ರಮ ಸೀಮಿತವಾಗದೇ ಎಲ್ಲಾ ಸಮಯದಲ್ಲೂ ಈ ದಿನ ಸಿಗುವ ಗೌರವ, ಮನ್ನಣೆ ಮಹಿಳೆಗೆ ಸಿಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರು ಹಾಗೂ ಅಧಿವಕ್ತ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಅಧ್ಯಕ್ಷ ಚೇತನ್ ನಾಯಕ್ ಮಾತನಾಡಿ, ಜಾಗತಿಕವಾಗಿ ಮಹಿಳಾ ಸಬಲೀಕರಣವನ್ನು ಸಾರುವ ದೃಷ್ಟಿಕೋನದಲ್ಲಿ ಮಹಿಳಾ ದಿನಾಚರಣೆ ನಡೆಸಲಾಗುತ್ತಿದೆ. ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧನೆ ಮಾಡಬೇಕಿದೆ. ಭಾರತದ ಮಹಿಳೆಯರಿಗಾಗಿ ಹಲವಾರು ಕಾನೂನುಗಳು ಹಾಗೂ ಪಾಲಿಸಿಗಳು ಈಗಾಗಲೇ ಬಂದಿದ್ದು, ಮುಂದಿನ ದಿನಗಳಲ್ಲಿ ಅದು ಇನ್ನಷ್ಟು ಉತ್ತಮ ರೀತಿಯಲ್ಲಿ ಕಾರ್ಯರೂಪಕ್ಕೆ ಬರಬೇಕಿದೆ. ಅದಿವಕ್ತ ಪರಿಷತ್ ಸಹಾ ಈ ನಿಟ್ಟಿನಲ್ಲಿ ಸತತವಾಗಿ ಮಹಿಳಾ ಸ್ನೇಹಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದರು.

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಅಕ್ಷತಾ ಎ.ಪಿ. ಮಾತನಾಡಿ, ಇಂದು ಮಹಿಳೆಯರು ಶ್ರಮ ಜೀವನದ ಮೂಲಕ ಸಾಧನೆ ಮಾಡುತ್ತಿದ್ದಾರೆ. ಆದರೆ ಗುರುತಿಸಿಕೊಂಡಿರುವ ಮಹಿಳೆಯರ ಸಂಖ್ಯೆ ಕಡಿಮೆಯಿದೆ. ಸಮಾಜದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಕೆಲಸ ನಿರ್ವಹಿಸುತ್ತಿದ್ದು, ಅವರಿಗೆ ಪ್ರತಿಯೊಬ್ಬರು ಗೌರವ ನೀಡಬೇಕು ಎಂದರು.

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಮಹಿಳಾ ಘಟಕದ ಸಂಯೋಜಕಿ ಸುಭಾಷಿನಿ ಜೆ. ಪ್ರಾಸ್ತವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಅಧಿವಕ್ತ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷರಾದ ಜಯಪ್ರಕಾಶ್ ಎನ್ ಮತ್ತು ಅಧಿವಕ್ತ ಪರಿಷದ್ ಪುತ್ತೂರು ಘಟಕದ ಪ್ರಧಾನ ಕಾರ್ಯದರ್ಶಿ ಶ್ಯಾಂ ಪ್ರಸಾದ್ ಕೈಲಾರ್ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿದ್ಯಾರ್ಥಿಗಳು ಹೊರ ತರುತ್ತಿರುವ ಜ್ಞಾನಬಿಂಬ ಭಿತ್ತಿಪತ್ರಿಕೆಯ ‘ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ’ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.

ವಿದ್ಯಾರ್ಥಿನಿ ಮಾನಸ ಸ್ವಾಗತಿಸಿ, ವಿದ್ಯಾರ್ಥಿನಿ ತೇಜಸ್ವಿನಿ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಕೃತಿಕಾ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here