5,8 ನೇ ತರಗತಿಗೆ ಪಬ್ಲಿಕ್ ಪರೀಕ್ಷೆಗೆ ತಡೆ ಆದೇಶ:ಸರಕಾರದಿಂದ ವಿಭಾಗೀಯ ಪೀಠಕ್ಕೆ ಮೇಲ್ಮನವಿ

0

ಬೆಂಗಳೂರು:೫ ಮತ್ತು ೮ನೇ ತರಗತಿ ಪಬ್ಲಿಕ್(ಬೋರ್ಡ್) ಪರೀಕ್ಷೆ ರದ್ದು ಮಾಡಿ ಹೈಕೋರ್ಟ್‌ನ ಏಕ ಸದಸ್ಯ ಪೀಠ ನೀಡಿದ್ದ ಆದೇಶದ ವಿರುದ್ಧ ರಾಜ್ಯ ಸರಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ. ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ವಿಭಾಗೀಯ ಪೀಠ ವಿಚಾರಣೆಯನ್ನು ಮಾ.೧೪ಕ್ಕೆ ಮುಂದೂಡಿದೆ.


ಸರ್ಕಾರದ ನಿರ್ಧಾರದ ವಿರುದ್ಧ ರುಪ್ಸಾ ಅರ್ಜಿ: ಈ ಶೈಕ್ಷಣಿಕ ವರ್ಷದಿಂದ ೫ ಮತ್ತು ೮ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ನಿರ್ಧರಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪಬ್ಲಿಕ್ ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು.೨೦೨೨-೨೩ನೇ ಸಾಲಿನ ೫ ಮತ್ತು ೮ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ ೧೨ ಡಿಸೆಂಬರ್ ೨೦೨೨ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಕ್ರಮ ಪ್ರಶ್ನಿಸಿ ರುಪ್ಸಾ ತಕರಾರು ಅರ್ಜಿ ಸಲ್ಲಿಸಿತ್ತು.ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠವು ಮಧ್ಯಂತ ತಡೆ ನೀಡಲು ನಿರಾಕರಿಸಿತ್ತು.ಬಳಿಕ ರುಪ್ಸಾ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರಸಕ್ತ ಶೈಕ್ಷಣಿಕ ಸಾಲಿನ ೫ ಮತ್ತು ೮ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷ ೫ ಮತ್ತು ೮ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದಕ್ಕೆ ತಡೆ ನೀಡಿ ಏಕಸದಸ್ಯ ಪೀಠ ಮಾ. ೧೦ರಂದು ತೀರ್ಪು ನೀಡಿತ್ತು.


ವಿಭಾಗಿಯ ಪೀಠಕ್ಕೆ ಮೇಲ್ಮನವಿ: ೫, ೮ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದಕ್ಕೆ ತಡೆ ನೀಡಿ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸರಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ.ಇದನ್ನು ವಿಚಾರಣೆಗೆ ಸ್ವೀಕರಿಸಿರುವ ವಿಭಾಗೀಯ ಪೀಠ, ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದ್ದು ವಿಚಾರಣೆಯನ್ನು ಮಾ.೧೪ಕ್ಕೆ ಮುಂದೂಡಿದೆ.

ಪರೀಕ್ಷೆ ಮುಂದೂಡಿಕೆ ಮಾ.೧೩ರಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡುವುದಾಗಿ ಸರ್ಕಾರ ತಿಳಿಸಿದೆ.

LEAVE A REPLY

Please enter your comment!
Please enter your name here