ಪುತ್ತೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ – ಕೇರಳ ಗಡಿಭಾಗಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರಿಂದ ತೀವ್ರ ತಪಾಸಣೆ, ಕಟ್ಟೆಚ್ಚರ ವಹಿಸಲಾಗಿದೆ.
ಪುತ್ತೂರು ಗ್ರಾಮಾಂತರ ವ್ಯಾಪ್ತಿಯ ಪಾಣಾಜೆ, ಈಶ್ವರಮಂಗಲ ಚೆಕ್‌ಪೋಸ್ಟ್ ಗಳಲ್ಲಿ ಕೇರಳದಿಂದ ಬರುವ ವಾಹನಗಳನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಚುನಾವಣೆ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ಮಾಹಿತಿ ಅನ್ವಯ ಈ ಕ್ರಮ ವಹಿಸಲಾಗಿದೆ ಎಂದು ತಿಳಿದುಬಂದಿದೆ. ಪುತ್ತೂರು ಗ್ರಾಮಾಂತರ ಠಾಣಾ ಇನ್ಸ್‌ಪೆಕ್ಟರ್ ಮಂಜುನಾಥ ಮತ್ತು ಸಬ್ ಇನ್ಸ್‌ಪೆಕ್ಟರ್ ಶ್ರೀನಾಥ್ ರೆಡ್ಡಿಯವರ ನೇತೃತ್ವದಲ್ಲಿ ಪೊಲೀಸರು ಬಿಗು ತಪಾಸಣೆ ನಡೆಸುತ್ತಿದ್ದಾರೆ.
ಚುನಾವಣೆ ಸಮೀಪಿಸುವಾಗ ಅಂತರಾಜ್ಯಗಳಿಂದ ಅಕ್ರಮ ಹಣ ಇನ್ನಿತರ ವಸ್ತುಗಳ ಅಕ್ರಮ ಸಾಗಾಟ ನಡೆಯುವ ಸಾಧ್ಯತೆಗಳು ಇರುವ ಹಿನ್ನೆಲೆಯಲ್ಲಿ ಮತ್ತು ದುರುದ್ದೇಶಪೂರ್ವಕವಾಗಿ ದುಷ್ಕೃತ್ಯ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ಈ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.