ಬೆಂಗಳೂರು: ರಾಜ್ಯದಲ್ಲಿ 5 ಹಾಗೂ 8ನೇ ತರಗತಿಗಳಿಗೆ ಪಬ್ಲಿಕ್(ಮೌಲ್ಯಾಂಕನ)ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದ್ದು ಮಾ. 27ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.
5, 8ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದ್ದ ಬೆನ್ನಲ್ಲೇ ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲು ವೇಳಾಪಟ್ಟಿ ತಯಾರಿಸಿತ್ತು. ಅದರಂತೆ ಮಾ.27ರಿಂದ ಪರೀಕ್ಷೆಗಳು ಪ್ರಾರಂಭಗೊಳ್ಳಲಿದೆ. ಹೈಕೋರ್ಟ್ ವಿಭಾಗೀಯ ಪೀಠದ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘದವರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರಲ್ಲದೆ, ಮಾ.೨೭27ರಂದು ಪರೀಕ್ಷೆಗಳು ಪ್ರಾರಂಭಗೊಳ್ಳಲಿರುವುದರಿಂದ ತುರ್ತು ವಿಚಾರಣೆ ನಡೆಸುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಹಾಗೂ ಜೆ.ಬಿ.ಪರ್ದಿವಾಲ ಅವರನ್ನು ಒಳಗೊಂಡ ಪೀಠ, ‘ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ರಾಜ್ಯಕ್ಕೆ ಯಾವುದು ಉತ್ತಮ ಎಂಬುದು ಉಚ್ಚ ನ್ಯಾಯಾಲಯಕ್ಕೆ ಗೊತ್ತಿದೆ. ಆದರೆ, ಮಾ.27ರಂದು ಅರ್ಜಿಯ ವಿಚಾರಣೆ ನಡೆಸಲಾಗುವುದು’ ಎಂದು ಹೇಳಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5 ಹಾಗೂ 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಇದಕ್ಕೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತಲ್ಲದೆ, ಅನುದಾನರಹಿತ ಶಾಲೆಗಳ ಸಂಘದವರು ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5,8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಹೈಕೋರ್ಟ್ ಏಕಸದಸ್ಯ ಪೀಠ, ಶಿಕ್ಷಣ ಇಲಾಖೆಯ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು. ಮುಂದಿನ ಶೈಕ್ಷಣಿಕ ವರ್ಷದಿಂದ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು. ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸರಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿಯನ್ನು ವಿಚಾರಣೆ ನಡೆಸಿದ ವಿಭಾಗೀಯ ಪೀಠ 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು. ಅದರಂತೆ ಶಿಕ್ಷಣ ಇಲಾಖೆ ಹೊಸದಾಗಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿತ್ತು. ಈ ನಡುವೆ ಹೈಕೋರ್ಟ್ ವಿಭಾಗೀಯ ಪೀಠದ ಆದೇಶದ ವಿರುದ್ಧ ಅನುದಾನರಹಿತ ಶಾಲೆಗಳ ಸಂಘದವರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದು ಮಾ.27ರಂದು ವಿಚಾರಣೆ ನಡೆಯಲಿದೆ.
‘ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ರಾಜ್ಯಕ್ಕೆ ಯಾವುದು ಉತ್ತಮ ಎಂಬುದು ಉಚ್ಚ ನ್ಯಾಯಾಲಯಕ್ಕೆ ಗೊತ್ತಿದೆ. ಆದರೆ, ಮಾ.27ರಂದು ಅರ್ಜಿಯ ವಿಚಾರಣೆ ನಡೆಸಲಾಗುವುದು’ ಎಂದು ಸುಪ್ರೀಂಕೋರ್ಟ್ ಹೇಳಿದೆ.