5, 8ನೇ ತರಗತಿ ಬೋರ್ಡ್ ಪರೀಕ್ಷೆ ಮುಂದೂಡಿಕೆ ಕೋರಿದ್ದ ಅರ್ಜಿ ಆಲಿಸಲು ಹೈಕೋರ್ಟ್ ನಿರಾಕರಣೆ

0

ಬೆಂಗಳೂರು:ರಾಜ್ಯ ಪಠ್ಯಕ್ರಮ ಹೊಂದಿದ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.27ರಿಂದ ಬೋರ್ಡ್ (ಮಂಡಳಿ) ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು ಇದನ್ನು ಮುಂದೂಡಬೇಕು ಎಂದು ಸಲ್ಲಿಸಲಾದ ಮನವಿಯನ್ನು ಆಲಿಸಲು ಹೈಕೋರ್ಟ್ ನಿರಾಕರಿಸಿದೆ.

ಅರ್ಜಿದಾರರಾದ ಅನುದಾನರಹಿತ ಖಾಸಗಿ ಶಾಲೆಗಳ ಪರ ವಕೀಲ ಎ.ವೇಲನ್ ಅವರು, ಕರ್ನಾಟಕ ಹೈಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಹಾಜರಾಗಿ ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಲು ಕೋರಿದರು.

ಬೋರ್ಡ್ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಹೈಕೋರ್ಟ್‌ನ ವಿಭಾಗೀಯ ವಿಶೇಷ ನ್ಯಾಯಪೀಠ ಮಧ್ಯಂತರ ತಡೆ ನೀಡಿ ಪಬ್ಲಿಕ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿತ್ತಲ್ಲದೆ ಮಾ.27ರಿಂದ ಪರೀಕ್ಷೆಗಳನ್ನು ನಡೆಸಲು ನಿರ್ದೇಶನ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದ್ದು ಮಾ.27ರಂದು ವಿಚಾರಣೆ ನಡೆಸಲಿದೆ ಎಂದು ವಕೀಲ ಎ.ವೇಲನ್ ಅವರು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ಮುಖ್ಯ ನ್ಯಾಯಮೂರ್ತಿ ವರಾಳೆ ಅವರು, ಪ್ರಕರಣವನ್ನು ಹೈಕೋರ್ಟ್‌ನ ವಿಭಾಗೀಯ ವಿಶೇಷ ನ್ಯಾಯಪೀಠ ವಿಚಾರಣೆ ನಡೆಸಿ ಮಧ್ಯಂತರ ಆದೇಶ ನೀಡಿದೆ. ಆ ನ್ಯಾಯಪೀಠದಲ್ಲಿ ನಾನಿಲ್ಲ. ಮಾತ್ರವಲ್ಲದೆ ಈಗಾಗಲೇ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ನಿಗದಿಯಾಗಿರುವಾಗ ಇಲ್ಲಿ ಹೇಗೆ ವಿಚಾರಣೆ ನಡೆಸಬೇಕು ಎಂದು ಕೋರುತ್ತೀರಿ. ಇದು ಸರಿಯಾದ ಕ್ರಮವಲ್ಲ. ನೀವು ರಿಜಿಸ್ಟ್ರಿಯನ್ನು ಸಂಪರ್ಕಿಸಿ ಎಂದು ಅರ್ಜಿದಾರರ ವಕೀಲರಿಗೆ ಸೂಚಿಸಿದರು.

LEAVE A REPLY

Please enter your comment!
Please enter your name here