ಮೂವರ ಹೆಸರು ಅಂತಿಮ ಪಟ್ಟಿಯಲ್ಲಿ?
ಪುತ್ತೂರು ಕ್ಷೇತ್ರಕ್ಕೆ ಸಂಬಂಧಿಸಿ ಕಾಂಗ್ರೆಸ್‌ನಿಂದ ಶ್ರೀಮತಿ ಶಕುಂತಳಾ ಟಿ.ಶೆಟ್ಟಿ, ಕೋಡಿಂಬಾಡಿ ಅಶೋಕ್ ಕುಮಾರ್ ರೈ ಮತ್ತು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಂ ಕೆ.ಬಿ.ಅವರ ಹೆಸರು ಅಂತಿಮ ಪಟ್ಟಿಯಲ್ಲಿದ್ದು ಈ ಮೂವರಲ್ಲಿ ಓರ್ವರ ಆಯ್ಕೆ ಖಚಿತ ಎಂದು ದೆಹಲಿ ಮೂಲಗಳು ತಿಳಿಸಿವೆ.
ಪುತ್ತೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ.ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗಾಗಿ ಭಾರೀ ಪೈಪೋಟಿ ಏರ್ಪಟ್ಟಿದ್ದು ಪ್ರಬಲ ಆಕಾಂಕ್ಷಿಗಳಲ್ಲಿ ಓರ್ವರಾಗಿರುವ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿಯವರಿಗೆ ಎಐಸಿಸಿಯಿಂದ ತುರ್ತು ಬುಲಾವ್ ಬಂದಿರುವ ಹಿನ್ನೆಲೆಯಲ್ಲಿ ಅವರು ಮಾ.31ರಂದು ಸಂಜೆಯೇ ದೆಹಲಿಗೆ ತೆರಳಿದ್ದಾರೆ.
ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಅವಕಾಶ ಕೋರಿ ಈಗಾಗಲೇ 14 ಮಂದಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ.ಮಾಜಿ ಶಾಸಕರಾದ ಶ್ರೀಮತಿ ಶಕುಂತಳಾ ಟಿ.ಶೆಟ್ಟಿ, ಉದ್ಯಮಿ ಅಶೋಕ್ ಕುಮಾರ್ ರೈ, ವಿಟ್-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಂ ಕೆ.ಬಿ., ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ,ಕೃಪಾ ಅಮರ್ ಆಳ್ವ, ಮಾಜಿ ಮೇಯರ್ ಪ್ರತಿಭಾ ಕುಳಾಯಿ ಸೇರಿದಂತೆ ಹಲವು ಪ್ರಮುಖರ ಹೆಸರು ಪುತ್ತೂರು ಕ್ಷೇತ್ರಕ್ಕೆ ಸಂಬಧಿಸಿ ಕೇಳಿ ಬರುತ್ತಿದ್ದು ಇದೀಗ ಕಾವು ಹೇಮನಾಥ ಶೆಟ್ಟಿಯವರಿಗೆ ಎಐಸಿಸಿಯಿಂದ ತುರ್ತು ಬುಲಾವ್ ಬಂದಿರುವುದರಿಂದ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ