ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದ್ದು ಮತದಾನದ ದಿನದಂದು ಎಲ್ಲಾ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.
ಈ ಸಂಬಂಧ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದು, ಮಾ.29ರಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆ ಮಾಡಲಾಗಿದ್ದು ಮೇ 10ರಂದು ಮತದಾನ ನಿಗದಿಪಡಿಸಲಾಗಿದೆ. ರಾಜ್ಯ ವಿಧಾಸಭಾ ಚುನಾವಣೆಯ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯದ ಎಲ್ಲಾ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸ್ವಾಮ್ಯಕ್ಕೆ ಒಳಪಟ್ಟ ಸಂಸ್ಥೆಗಳಿಗೆ, ಸರ್ಕಾರಿ ಹಾಗೂ ಖಾಸಗಿ, ಅನುದಾನಿತ, ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ, ಔದ್ಯಮಿಕ ಸಂಸ್ಥೆಗಳ ಹಾಗೂ ಇನ್ನಿತರ ಸಂಸ್ಥೆಗಳಿಗೆ ಮೇ10ರಂದು ಸಾರ್ವತ್ರಿಕ ರಜೆ ಘೋಷಿಸುವಂತೆ ತಿಳಿಸಿದ್ದಾರೆ.
ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು, ಇನ್ನಿತರ ಎಸ್ಟಾಬ್ಲಿಷ್ಮೆಂಟ್ಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ರೆಪ್ರೆಸೆಂಟೇಷನ್ ಆಫ್ ಪೀಪಲ್ ಆಕ್ಟ್ 1951ರ ಕಲಂ 135ಬಿ ರಡಿಯಲ್ಲಿ ವೇತನ ಸಹಿತ ರಜೆ ನೀಡಲು ಮುಖ್ಯ ಚುನಾವಣಾ ಆಯುಕ್ತರು ಸೂಚಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗದ ಸೂಚನೆಯ ಮೇರೆಗೆ ಶೀಘ್ರವೇ ರಾಜ್ಯದ ಮುಖ್ಯ ಚುನಾವಣಾ ಆಯುಕ್ತರು ಆದೇಶ ಹೊರಡಿಸಲಿದ್ದಾರೆ. ಅದರಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು, ನೆಗೋಷಿಯಬಲ್ ಇನ್ಸ್ಟ್ರೂಮೆಂಟ್ ಆಕ್ಟ್ 1881, ಕಲಂ 25ರಡಿ ಮತ್ತು ರೆಪ್ರೆಸೆಂಟೇಷನ್ ಆಫ್ ಪೀಪಲ್ ಆಕ್ಟ್ 1951ರ ಕಲಂ 135ಬಿ ರಡಿಯಲ್ಲಿ ಮೇ 10ರಂದು ವೇತನ ಸಹಿತ ರಜೆಯನ್ನು ಘೋಷಣೆ ಮಾಡಲಿದ್ದಾರೆ.