ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ₹.61.38 ಕೋಟಿ ಲಾಭ

0

ಕಳೆದ ವರ್ಷದ ಲಾಭಕ್ಕಿಂತ ಶೇ.21.57 ಏರಿಕೆ-ಸಾರ್ವಕಾಲಿಕ ದಾಖಲೆ-ಡಾ.ಎಂ.ಎನ್.ಆರ್

  • ಕೃಷಿ ಸಾಲ ವಸೂಲಾತಿಯಲ್ಲಿ ಸತತ 28 ವರ್ಷಗಳಿಂದ ಶೇ.100 ಸಾಧನೆ
  • ಶೀಘ್ರ 15 ಹೊಸ ಶಾಖೆಗಳು ಪ್ರಾರಂಭ
  • ಇತರ 13 ತಾಲೂಕು ಮುಖ್ಯ ಶಾಖೆಗಳಲ್ಲಿ ಎಟಿಎಂ ವ್ಯವಸ್ಥೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದ್ದು, ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೇ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಸಹಕಾರಿ ರಂಗದಲ್ಲಿ ವಿಶಿಷ್ಟ ಹಾಗೂ ವಿನೂತನ ಬ್ಯಾಂಕಿಂಗ್ ಸೇವೆಯನ್ನು ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ತನ್ನ 111 ಶಾಖೆಗಳ ಮೂಲಕ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಜನಸಾಮಾನ್ಯರ ಬ್ಯಾಂಕ್ ಆಗಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಚಾರ. 109 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವರದಿ ವರ್ಷದಲ್ಲಿ ಅಮೋಘ ಸಾಧನೆಗೈದು ಇದೇ ಮಾರ್ಚ್ 31ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ರೂ.61.38 ಕೋಟಿ ಲಾಭ ಗಳಿಸಿದ್ದು ಕಳೆದ ವರ್ಷದ ಲಾಭಕ್ಕಿಂತ ಶೇಕಡಾ 21.57 ಏರಿಕೆಯಾಗಿದೆ. ಇದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶಾಖೆಗಳನ್ನು ಹೊಂದಿದ್ದು ಗ್ರಾಹಕರನ್ನು ಹೆಚ್ಚು ಆಕರ್ಷಿಸುತ್ತಿದೆ.ವರದಿ ವರ್ಷದಲ್ಲಿ ರೂ.13,512 ಕೋಟಿ ರೂಪಾಯಿಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ಶೇ 16.40 ಏರಿಕೆಯನ್ನು ಕಂಡಿದೆ.2023-24ನೇ ಸಾಲಿಗೆ ರೂ.15,000 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ ಎಂದು ಡಾ|ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಠೇವಣಾತಿ ಇಲ್ಲದೆಯೂ ಬ್ಯಾಂಕ್ ತನ್ನ 111 ಶಾಖೆಗಳ ಮುಖಾಂತರ ಒಟ್ಟು ರೂ.6,368.50 ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ. ಈ ಮೂಲಕ ಎಸ್‌ಸಿಡಿಸಿಸಿ ಬ್ಯಾಂಕ್ ಠೇವಣಿ ಸಂಗ್ರಹಣೆಯಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಣೆಗಿಂತ ಈ ಬಾರಿ ಶೇ.12.69 ಏರಿಕೆಯಾಗಿದೆ. ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ ರೂ.1,681.46 ಕೋಟಿ ರೂಪಾಯಿ, ಮಧ್ಯಮಾವಧಿ ಸಾಲ ರೂ 150.20 ಕೋಟಿ ರೂಪಾಯಿ, ಹೀಗೆ ಕೃಷಿ ಕ್ಷೇತ್ರಕ್ಕೆ ಒಟ್ಟು ರೂ 1,83166 ಕೋಟಿ ರೂಪಾಯಿ ಸಾಲ ನೀಡಲಾಗಿದೆ. ಕೃಷಿಯೇತರ ಸಾಲವಾಗಿ ರೂ.3,863.89 ಕೋಟಿ ಸಾಲ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ ಕೃಷಿ ಹಾಗೂ ಕೃಷಿಯೇತರ ಸಾಲಗಳ ಹೊರಬಾಕಿ ರೂ.7,143.38 ಕೋಟಿಯಾಗಿರುತ್ತದೆ. ಕಳೆದ ವರ್ಷದ ಹೊರಬಾಕಿ ಸಾಲ ರೂ.5,956.87 ಕೋಟಿಯಾಗಿದ್ದು ಕಳೆದ ಸಾಲಿಗಿಂತ ಶೇ 19.92 ಏರಿಕೆಯಾಗಿರುತ್ತದೆ ಎಂದು ಡಾ|ಎಂ.ಎನ್.ಆರ್ ಮಾಹಿತಿ ನೀಡಿದರು.

ಸತತ 28 ವರ್ಷಗಳಿಂದ ಶೇ.100 ಸಾಲ ವಸೂಲಾತಿ ಸಾಧನೆ: ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ 100ರ ಮರುಪಾವತಿಯನ್ನು ಕಂಡು ದಾಖಲೆ ನಿರ್ಮಿಸಿ ಸಾಧನೆಗೈದಿದೆ. ಇಂತಹ ಸಾಧನೆಯನ್ನು ಕಳೆದ 28 ವರ್ಷಗಳಿಂದ ಸತತವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ ಎಂದು ಡಾ|ರಾಜೇಂದ್ರ ಕುಮಾರ್ ಹೇಳಿದರು.

ಬ್ಯಾಂಕಿನ ಸಾಧನೆ: ಬ್ಯಾಂಕಿಗೆ 20 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, 18 ಬಾರಿ ನಬಾರ್ಡ್ ಪ್ರಶಸ್ತಿ ದೊರೆತಿದೆ.ಎರಡು ಬಾರಿ ಫ್ರಾಂಟಿಯರ‍್ಸ್ ಇನ್ ಕೋಅಪರೇಟಿವ್ ಬ್ಯಾಂಕಿಂಗ್ ಎವಾರ್ಡ್ (ಎಫ್‌ಸಿಬಿಎ) ರಾಷ್ಟ್ರೀಯ ಪ್ರಶಸ್ತಿಯಿಂದ ಬ್ಯಾಂಕ್ ಪುರಸ್ಕೃತಗೊಂಡಿದೆ. ಬ್ಯಾಂಕಿನ ಸರ್ವಾಂಗೀಣ ಸಾಧನೆಗಾಗಿ ಎರಡು ಬಾರಿ ಪ್ರತಿಷ್ಠಿತ `ಬ್ಯಾಂಕೊ ಬ್ಲೂ ರಿಬ್ಬನ್ ಪ್ರಶಸ್ತಿ’ ಲಭಿಸಿದೆ. ಕೇಂದ್ರ ಸರಕಾರದ ಮಹತ್ತರ ಯೋಜನೆಯಾದ ಅಟಲ್ ಪಿಂಚಣಿ ಯೋಜನೆಯನ್ನು ಬ್ಯಾಂಕ್ ಸಮರ್ಪಕವಾಗಿ ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಚಂದಾದಾರರನ್ನು ಬ್ಯಾಂಕ್ ನೋಂದಾಯಿಸಿ ವರದಿ ವರ್ಷದಲ್ಲಿ 2 ಬಾರಿ ಭಾರತ ಸರ್ಕಾರದ ಹಣಕಾಸು ಸಚಿವಾಲಯದಿಂದ ಪ್ರಶಸ್ತಿಗೆ ಪಾತ್ರವಾಗಿದೆ. ಸ್ವ ಸಹಾಯ ಗುಂಪುಗಳ ಸಮರ್ಪಕ ಅನುಷ್ಠಾನದಲ್ಲಿ ಬ್ಯಾಂಕ್‌ಗೆ ರಾಜ್ಯದಲ್ಲೇ ಪ್ರಥಮ ಸ್ಥಾನ. ಬ್ಯಾಂಕ್ ಒಟ್ಟು 34,099 ಗುಂಪುಗಳನ್ನು ಹೊಂದಿದೆ. ಉಭಯ ಜಿಲ್ಲೆಗಳ ಎಲ್ಲಾ ನವೋದಯ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯೆಯರಿಗೆ ಈಗಾಗಲೇ ಸಮವಸ್ತ್ರ ವಿತರಣೆಯನ್ನು ಮಾಡಲಾಗಿದೆ. ಮಾತ್ರವಲ್ಲ ಪುರುಷ ಸದಸ್ಯರಿಗೂ ಬಿಳಿ ಸಮವಸ್ತ್ರ ನೀಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1,22,728 ರೈತರಿಗೆ ಮಂಗಳಾ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ವಿತರಿಸಲಾಗಿದೆ. 89,924 ಕಿಸಾನ್ ಕ್ರೆಡಿಟ್ ಕಾರ್ಡುದಾರರಿಗೆ ವೈಯುಕ್ತಿಕ ಅಪಘಾತ ವಿಮಾ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಡಾ|ರಾಜೇಂದ್ರ ಕುಮಾರ್ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್‌ನ ಶಶಿಕುಮಾರ್ ರೈ ಬಾಲ್ಯೊಟ್ಟು, ಎಂ.ವಾದಿರಾಜ ಶೆಟ್ಟಿ, ರಾಜು ಪೂಜಾರಿ, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ, ಕೆ.ಜೈರಾಜ್ ಬಿ ರೈ, ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಸಹಕಾರ ಸಂಘಗಳ ಉಪ ನಿಬಂಧಕರಾದ ರಮೇಶ್ ಎಚ್.ಎನ್., ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಹಾಗೂ ಬ್ಯಾಂಕ್ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಯೋಜನೆಗಳು: ಬ್ಯಾಂಕ್ ಮುಂದಿನ ಅವಧಿಯಲ್ಲಿ 15 ಹೊಸ ಶಾಖೆಗಳನ್ನು ತೆರೆಯುವ ಯೋಜನೆಯನ್ನು ಹಮ್ಮಿಕೊಂಡಿದೆ. ಈಗಾಗಲೇ 3 ತಾಲೂಕಿನ ಬ್ಯಾಂಕಿನ ಮುಖ್ಯ ಶಾಖೆಗಳಲ್ಲಿ ಎಟಿಎಂ ಅಳವಡಿಸಲಾಗಿದ್ದು ಮುಂದೆ ಉಳಿದ 13 ತಾಲೂಕಿನ ಮುಖ್ಯ ಶಾಖೆಗಳಲ್ಲಿಯೂ ಎ.ಟಿ.ಎಂ.ಅಳವಡಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.ಇಮ್ಮಿಡಿಯೇಟ್ ಪೇಮೆಂಟ್ ಸರ್ವಿಸ್ ಪ್ರಾರಂಭಿಸಲಾಗುವುದು. IMPS (Immediate Payment Servce) ಯೋಜನೆಯನ್ನು ಕಾರ್ಯಗತಗೊಳಿಸಲು ಚಿಂತನೆ ನಡೆಸಿದೆ. ಈ ಯೋಜನೆಯಿಂದ ಗ್ರಾಹಕರು ತಮ್ಮ ಖಾತೆಯಿಂದ ಇತರ ಬ್ಯಾಂಕಿನ ಖಾತೆಗೆ ಹಣ ವರ್ಗಾಯಿಸಬಹುದು. ಇಂಟರ್‌ನೆಟ್ ಬ್ಯಾಂಕಿಂಗ್ ಸೇವೆಯೂ ಶೀಘ್ರದಲ್ಲಿ ಆರಂಭಗೊಳ್ಳಲಿದೆ. ಭಾರತ್ ಬಿಲ್ ಪೇಮೆಂಟ್ ಸಿಸ್ಟಮ್ (BBPS) ಯೋಜನೆ ಇದು ಜನೋಪಯೋಗಿ ಯೋಜನೆಯಾಗಿದೆ. ಇದರಿಂದ ವಿದ್ಯುತ್ ಬಿಲ್, ನೀರಿನ ಬಿಲ್, ಡಿ.ಟಿ.ಎಚ್.ರಿಚಾರ್ಜ್ ಇತ್ಯಾದಿ ಪಾವತಿಗಳನ್ನು ಬ್ಯಾಂಕಿನ ಶಾಖೆಗಳಲ್ಲಿ ನಿರ್ವಹಿಸುವ ಯೋಜನೆ ಇದಾಗಿದೆ ಎಂದು ಡಾ| ಎಂ.ಎನ್.ಆರ್. ವಿವರಿಸಿದರು.

LEAVE A REPLY

Please enter your comment!
Please enter your name here