ಪುತ್ತೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಏ.6ರಂದು ಬೆಳಗ್ಗೆ 11 ಗಂಟೆಯೊಳಗೆ ಪ್ರಕಟವಾಗಲಿದೆ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಏ.4,5ರಂದು ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆದಿದ್ದು,ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗಿಯಾಗಿದ್ದರು.ಏ.6ರ ಬೆಳಗ್ಗೆ 11 ಗಂಟೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟವಾಗಲಿದೆ ಎಂದು ಹೇಳಿದರು. ಪುತ್ತೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಬಾಕಿಯಿರುವ ಇತರ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರೂ ಎರಡನೇ ಪಟ್ಟಿಯಲ್ಲಿ ಇರಲಿದೆ ಎಂದು ಮಾಹಿತಿ ಲಭಿಸಿದೆ. ಪುತ್ತೂರು ಕ್ಷೇತ್ರಕ್ಕೆ ಸಂಬಂಧಿಸಿ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ ಟಿ.ಶೆಟ್ಟಿ, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಮತ್ತು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ.ಅವರ ಹೆಸರುಗಳು ಕೇಳಿ ಬರುತ್ತಿದ್ದು ಅಭ್ಯರ್ಥಿಯಾಗಿ ಯಾರು ಆಯ್ಕೆಯಾಗಲಿದ್ದಾರೆ ಎನ್ನುವುದು ಏ.6ರಂದು ಘೋಷಣೆಯಾಗುವುದು ಬಹುತೇಕ ಖಚಿತವಾಗಿದೆ. ಸುಳ್ಯ ಕ್ಷೇತ್ರಕ್ಕೆ ಸಂಬಂಧಿಸಿ ಈಗಾಗಲೇ ಅಭ್ಯರ್ಥಿಯ ಹೆಸರು ಘೋಷಣೆಯಾಗಿದ್ದರೂ ಪಕ್ಷದ ಹಲವು ಕಾರ್ಯಕರ್ತರು ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು ನಂದ ಕುಮಾರ್ ಅವರಿಗೆ ಅವಕಾಶ ನೀಡಬೇಕು ಎಂದು ಈಗಾಗಲೇ ಪಕ್ಷದ ನಾಯಕರಿಗೆ ಮನವಿ ಮಾಡಿದ್ದಾರೆ. ಪಕ್ಷದ ಜಿಲ್ಲಾ ಕಚೇರಿ ಎದುರು ಪ್ರತಿಭಟನೆಯನ್ನೂ ನಡೆಸಿದ್ದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸುಳ್ಯ ಕ್ಷೇತ್ರದ ಅಭ್ಯರ್ಥಿಯ ಬದಲಾವಣೆ ಆಗುವುದೇ ಎನ್ನುವುದನ್ನು ಕಾದು ನೋಡಬೇಕಾಗಿದೆ.
ಮತ್ತೊಂದೆಡೆ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾದ ಬಳಿಕವೇ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ ಎಂದೂ ಹೇಳಲಾಗುತ್ತಿದೆ.