ಮಂಗಳೂರು:ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿರುವ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಗೆ ಅಗತ್ಯವಿರುವ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾ ಅಧಿಕಾರಿಗಳೂ ಆಗಿರುವ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ನಿಯೋಜನೆಗೊಂಡಿರುವ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಅಧಿಕಾರಿಗಳು ಕರ್ತವ್ಯ ಹಾಗೂ ತಾವು ವಹಿಸಬೇಕಾದ ಪಾತ್ರದ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರಬೇಕು. ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲೂ ಪ್ರಚಾರ ಕಾರ್ಯಗಳು ಬಿರುಸು ಪಡೆಯುತ್ತವೆ. ಈ ಸಂಬಂಧ ನಿಯೋಜಿತ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ಕೈಗೊಳ್ಳಬೇಕಾದ ಕೆಲಸ ಕಾರ್ಯಗಳ ಸಿದ್ಧತೆಯನ್ನು ಈಗಲೇ ಮಾಡಿಟ್ಟುಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಸೂಚಿಸಿದರು. ಸಿವಿಜಿಲ್, ಸುವಿಧಾ ಸಹಿತ ವಿವಿಧ ಕ್ರಮಗಳ ಬಗ್ಗೆ ಹೆಚ್ಚಿನ ಜಾಗೃತ ವಹಿಸಬೇಕು. ಯಾವುದೇ ದೂರು ದಾಖಲಾದ ಕೂಡಲೇ ಅದಕ್ಕೆ ಪ್ರತಿಕ್ರಿಯೆ ನೀಡಲು ಸನ್ನದ್ಧರಾಗಬೇಕು. ಜಿಲ್ಲೆಯು ಜಲ ಮಾರ್ಗವನ್ನೂ ಹೊಂದಿರುವ ಕಾರಣ ಹೊರಗಿನಿಂದ ಬರಬಹುದಾದ ವಸ್ತುಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಸೂಚಿಸಿದರು.
ದ.ಕ.ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ಅಮಟೆ ವಿಕ್ರಂ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚೆನ್ನಬಸಪ್ಪ ,ಅಪರ ಜಿಲ್ಲಾಽಕಾರಿ ಕೃಷ್ಣಮೂರ್ತಿ ಎಚ್.ಕೆ. ಮತ್ತು ವಿವಿಧ ಸಮಿತಿಗಳ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.