ಚುನಾವಣಾ ನೀತಿಸಂಹಿತೆ ಜಾರಿ: ಸಾಮಾಜಿಕ ಜಾಲತಾಣಗಳಲ್ಲಿ ಅಕ್ಷೇಪಾರ್ಹ, ಕಾನೂನು ಬಾಹಿರ ಪೋಸ್ಟ್‌ಗಳನ್ನು ಪ್ರಸಾರ ಮಾಡಿದಲ್ಲಿ ಕಾನೂನು ಕ್ರಮ- ದ.ಕ.ಜಿಲ್ಲಾ ಎಸ್‌ಪಿ ಪ್ರಕಟಣೆ

0

ಪುತ್ತೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಅಕ್ಷೇಪಾರ್ಹ ಪೊಸ್ಟ್‌ಗಳನ್ನು ಅಥವಾ ಯಾವುದೇ ಕಾನೂನುಬಾಹಿರ ಪೋಸ್ಟ್‌ಗಳನ್ನು ಪ್ರಸಾರ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿ ಪ್ರಕಟಣೆ ಹೊರಡಿಸಿದೆ.

ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳ ಕಛೇರಿಯಲ್ಲಿ, ಜಿಲ್ಲಾ ಪೊಲೀಸ್ ಕಛೇರಿಯಲ್ಲಿ, ಪುತ್ತೂರು ಮತ್ತು ಬಂಟ್ವಾಳ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗಳಲ್ಲಿ Social Media Monitoring Cell ಕಾರ್ಯನಿರ್ವಹಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಎಲ್ಲಾ ರೀತಿಯ ಪೋಸ್ಟ್‌ಗಳ ಮೇಲೆ ನಿಗಾ ಇರಿಸಿ ಪರಿಶೀಲಿಸುತ್ತಿದೆ.

ಆಕ್ಷೇಪಾರ್ಹ ಪೋಸ್ಟ್‌ಗಳು: ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗುವಂತಹ ಪೋಸ್ಟ್‌ಗಳನ್ನು ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವ ಸುದ್ದಿ ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಅಶ್ಲೀಲ, ಅಸಭ್ಯ ವಿಷಯಗಳನ್ನು ಒಳಗೊಂಡ ಪೋಸ್ಟ್‌ಗಳನ್ನು ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ಚಾರಿತ್ರ್ಯಹರಣ ಹಾಗೂ ಮಾನಹಾನಿ ಉಂಟಾಗುವಂತಹ ಪೋಸ್ಟ್ ಗಳನ್ನು ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಇಂತಹ ಯಾವುದೇ ಅಕ್ಷೇಪಾರ್ಹ ಪೊಸ್ಟ್‌ಗಳನ್ನು ಅಥವಾ ಯಾವುದೇ ಕಾನೂನುಬಾಹಿರ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here