ಪುತ್ತೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ನಿಂದ ಸ್ಪರ್ಧಿಸಲು ಕೋಡಿಂಬಾಡಿ ಅಶೋಕ್ ಕುಮಾರ್ ರೈಯವರಿಗೆ ಹೈಕಮಾಂಡ್ ಅವಕಾಶ ಕಲ್ಪಿಸಿದೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಈಗಾಗಲೇ 2 ಹಂತದಲ್ಲಿ ಬಿಡುಗಡೆಗೊಳಿಸಿದೆ. ಪುತ್ತೂರು ಸೇರಿದಂತೆ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಲು ಕಾಂಗ್ರೆಸ್ ಬಾಕಿ ಇರಿಸಿಕೊಂಡಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತು ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈಯವರ ಹೆಸರು ಪ್ರಮುಖ ರೇಸ್ನಲ್ಲಿತ್ತು. ಇದೀಗ ಕೆಪಿಸಿಸಿ ಮತ್ತು ಸ್ಕ್ರೀನಿಂಗ್ ಕಮಿಟಿ ಅಶೋಕ್ ಕುಮಾರ್ ರೈಯವರ ಹೆಸರನ್ನು ಅಂತಿಮಗೊಳಿಸಿದೆ. ಎಐಸಿಸಿಯ ಅಂತಿಮ ಮುದ್ರೆಯೊಂದಿಗೆ ಪಟ್ಟಿ ಅಧಿಕೃತವಾಗಿ ಬಿಡುಗಡೆಗೊಳ್ಳಲಿದ್ದು ಪುತ್ತೂರು ಕ್ಷೇತ್ರಕ್ಕೆ ಅಶೋಕ್ ಕುಮಾರ್ ರೈ ಹೆಸರು ಘೋಷಣೆಯಾಗುವುದು ಖಚಿತವಾಗಿದೆ. ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರೂ, ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕರೂ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸಾಮಾಜಿಕ ಮುಂದಾಳು ಅಶೋಕ್ ಕುಮಾರ್ ರೈಯವರನ್ನು ಸಂಪರ್ಕಿಸಿರುವ ಹೈಕಮಾಂಡ್ ತಮಗೆ ಈ ಬಾರಿ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗುವುದು, ಸಿದ್ಧತೆ ಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ. ಪುತ್ತೂರಿನ ಕಾಂಗ್ರೆಸ್ ಪ್ರಮುಖರಿಗೂ ರಾಜ್ಯ ಕಾಂಗ್ರೆಸ್ ನಾಯಕರು ಅಶೋಕ್ ರೈಯವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.