ಪುತ್ತೂರು ಕ್ಷೇತ್ರದಿಂದ ಗೌಡ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡಲೇಬೇಕು

0

ಅವಕಾಶ ಕಲ್ಪಿಸದಿದ್ದಲ್ಲಿ ಈ ಚುನಾವಣೆ, ಲೋಕಸಭಾ ಚುನಾವಣೆ ಮೇಲೂ ವ್ಯತಿರಿಕ್ತ ಪರಿಣಾಮ

ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಸುದ್ದಿಗೋಷ್ಠಿಯಲ್ಲಿ ಆಗ್ರಹ

ಮಂಗಳೂರು:ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ದ.ಕ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ಎರಡು ಸ್ಥಾನಗಳಲ್ಲಿ ಒಕ್ಕಲಿಗ ಗೌಡರಿಗೆ ಪ್ರಾತಿನಿಧ್ಯ ನೀಡಬೇಕು. ಅದರಲ್ಲೂ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗಳನ್ನು ಪರಿಗಣಿಸಲೇಬೇಕು ಎಂದು ಅವರು ಆಗ್ರಹಿಸಿದರು.

ಪುತ್ತೂರು ಕ್ಷೇತ್ರದಲ್ಲಿ ಶಾಸಕರಾಗಿರುವ ನಮ್ಮ ಸಮುದಾಯದ ಸಮರ್ಥ ನಾಯಕ ಸಂಜೀವ ಮಠಂದೂರು ಅವರಿಗೆ ಈ ಬಾರಿ ಟಿಕೆಟ್ ಇಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇದು ನಿಜವೇ ಆಗಿದ್ದಲ್ಲಿ ಮಠಂದೂರು ಅವರಿಗೆ ಟಿಕೆಟ್ ದೊರೆಯದಿರಲು ಕಾರಣವೇನು ಎಂದು ಅವರು ಪ್ರಶ್ನಿಸಿದರು.

ಜಿಲ್ಲೆಯಲ್ಲಿ ಸುಮಾರು 3.75 ಲಕ್ಷ ಮತದಾರರಿದ್ದು, ಈ ಪೈಕಿ ಪುತ್ತೂರಿನಲ್ಲಿ ಅತೀ ಹೆಚ್ಚು ಗೌಡ ಸಮುದಾಯದ ಮತದಾರರಿದ್ದಾರೆ. ಆದ್ದರಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಾದರೂ ಒಂದು ಸ್ಥಾನ ನೀಡಬೇಕು ಎಂದು ಈ ಹಿಂದೆಯೇ ವಿವಿಧ ರಾಜಕೀಯ ಪಕ್ಷಗಳಿಗೆ ಒತ್ತಾಯಿಸಲಾಗಿತ್ತು. ಆದರೆ ಇತ್ತೀಚಿನ ವರದಿಗಳನ್ನು ಗಮನಿಸಿದಾಗ ಸಮುದಾಯದ ಯಾವೊಬ್ಬ ನಾಯಕರ ಹೆಸರೂ ಪ್ರಸ್ತಾಪವಾಗಿರುವುದು ಕಂಡು ಬಂದಿಲ್ಲ. ಪುತ್ತೂರಿನಲ್ಲಿ ಗೌಡ ಸಮುದಾಯದವರಿಗೆ ಸ್ಥಾನ ಕಲ್ಪಿಸದಿದ್ದಲ್ಲಿ ಮೇ 10ರಂದು ನಡೆಯುವ ಚುನಾವಣೆ ಮತ್ತು 2024ರ ಲೋಕಸಭಾ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಅವರು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ನಿರ್ದೇಶಕ ಪದ್ಮನಾಭ ಗೌಡ, ಗುರುದೇವ್ ಯು.ಬಿ. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here