ಪುತ್ತೂರು:ಲಂಚ, ಭ್ರಷ್ಟಾಚಾರದ ವಿರುದ್ಧ ಸುದ್ದಿ ಜನಾಂದೋಲನ ವೇದಿಕೆ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ಆಂದೋಲನಕ್ಕೆ ವ್ಯಾಪಕ ಜನಬೆಂಬಲ ವ್ಯಕ್ತವಾಗುತ್ತಿದ್ದು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳೂ ಅಂದೋಲನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಲಂಚ, ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ. ಒಂದು ವೇಳೆ ಅಧಿಕಾರಿಗಳು ಜನರಿಂದ ಲಂಚ ಪಡೆದುಕೊಂಡಿದ್ದೇ ಆದಲ್ಲಿ ಅದನ್ನು ಕಾನೂನಿನ ನೆಲೆಯಲ್ಲಿ ವಾಪಸ್ ತೆಗೆಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವ ಪ್ರತಿಜ್ಞೆ ಮಾಡಿದ್ದಾರೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ, ಮೂಡಬಿದ್ರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ಬಿಜೆಪಿ ಅಭ್ಯರ್ಥಿಯಾಗಿರುವ ಶಾಸಕ ಉಮಾನಾಥ್ ಕೋಟ್ಯಾನ್, ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ವೇದವ್ಯಾಸ ಕಾಮತ್, ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ, ಆಮ್ ಆದ್ಮಿ ಅಭ್ಯರ್ಥಿ ಸಂತೋಷ್ ಕಾಮತ್, ಮಂಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಯು.ಟಿ.ಖಾದರ್, ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರು ಲಂಚ, ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ ಮಾಡಿದ್ದಾರೆ.
ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ, ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಆಮ್ ಆದ್ಮಿಯ ಡಾ|ಬಿ.ಕೆ.ವಿಶು ಕುಮಾರ್, ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಈಗಾಗಲೇ ಲಂಚ, ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ ಮಾಡಿದ್ದಾರೆ.