ರಾಮಕುಂಜ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಮೇ ೫ರಂದು ರಾಮಕುಂಜದ ಶ್ರೀ ರಾಮಕುಂಜೇಶ್ವರ ವಸತಿ ಶಾಲೆಯ ಸಭಾಂಗಣದಲ್ಲಿ ಜರಗಿತು.
ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ಅಧ್ಯಕ್ಷರಾದ ಕೆ ಸೇಸಪ್ಪ ರೈಯವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆಯ ಉದ್ದೇಶದ ಬಗ್ಗೆ ವಿವರಿಸಿದರು. ಪುತ್ತೂರು ಬಿಆರ್ಸಿ ಓಬಳೇಶ್ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಉಗಮದ ಇತಿಹಾಸ ಮತ್ತು ಕಾರ್ಯಗಳ ಬಗ್ಗೆ ಉಪನ್ಯಾಸಗೈದರು. ರಾಮಕುಂಜ ಸಿ.ಆರ್.ಪಿ. ಮಹೇಶ್, ಜನಾರ್ದನ ಗೌಡ ಪಣೆಮಜಲು ಉಪಸ್ಥಿತರಿದ್ದರು. ಸಭೆಯಲ್ಲಿ ಕ.ಸಾ.ಪ ಕಡಬ ತಾಲೂಕು ಘಟಕದ ಪದಾಧಿಕಾರಿಗಳು, ಶಾಲಾ ಮುಖ್ಯಗುರುಗಳು, ಶಿಕ್ಷಕರು, ಕನ್ನಡಾಭಿಮಾನಿಗಳು ಪಾಲ್ಗೊಂಡಿದ್ದರು. ಸಂಸ್ಥೆಯ ಮುಖ್ಯಗುರು ಗಾಯತ್ರಿ ಯು.ಎನ್ ವಂದಿಸಿದರು. ಕ.ಸಾ.ಪ ಕಡಬ ತಾಲೂಕು ಘಟಕದ ಪದಾಧಿಕಾರಿ ಬಾಲಚಂದ್ರ ಮುಚ್ಚಿಂತ್ತಾಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.