ಪುತ್ತೂರು: ಪುತ್ತೂರಿನಲ್ಲಿ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಏಳು ಮಂದಿ ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎಂಬ ಮಾಹಿತಿ ಇದ್ದು ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ ನಡೆಸಿ ತಪ್ಪತಸ್ಥರ ವಿರುದ್ದ ಕಾನೂನುಕ್ರಮ ಕೈಗೊಳ್ಳಬೇಕು ಮತ್ತು ಇವತ್ತು ಸಂಜೆ 3ಗಂಟೆಯೊಳಗೆ ಸಸ್ಪೆಂಡ್ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್‌ಕುಮಾರ್ ರೈ ಯವರು ಪೊಲೀಸ್ ಇಲಾಖೆಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ.
ಬೆಂಗಳೂರಿನಲ್ಲಿರುವ ಶಾಸಕರು ದೂರವಾಣಿ ಮೂಲಕ ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಪ್ರಕರಣದ ಬಗ್ಗೆ ಇಲಾಖಾವಾರು ತನಿಖೆ ನಡೆಸಬೇಕು. ಪ್ರಕರಣದಲ್ಲಿ ಯಾರು ತಪ್ಪಿತಸ್ಥರಾದರೂ ಅವರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು. ಇವತ್ತು ಸಂಜೆಯೊಳಗೆ ಹಲ್ಲೆ ಮಾಡಿದವರ ವಿರುದ್ದ ಕ್ರಮಕೈಗೊಳ್ಳುವ ಮೂಲಕ ಅವರನ್ನು ಸಸ್ಪೆಂಡ್ ಮಾಡಬೇಕು ಎಂದು ಸೂಚನೆಯನ್ನು ನೀಡಿದ್ದಾರೆ.
ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂದಿಸಿದಂತೆ ಪುತ್ತೂರಿನ ನರಿಮೊಗರು ಗ್ರಾಮದ ಏಳುಮಂದಿಯನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆದಿರುವ ವಿಚಾರ ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು.