ಪುತ್ತೂರು:ವೈದ್ಯಕೀಯ, ಇಂಜಿನಿಯರಿಂಗ್ ಪದವಿ ಸೇರ್ಪಡೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಮೇ 20, 21ರಂದು ನಡೆಯಲಿದೆ. ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ದ.ಕ.ಜಿಲ್ಲೆಯಿಂದ 16, 113 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ದ.ಕ.ಡಿಡಿಪಿಯು ಜಯಣ್ಣ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ವಾಚ್, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು, ತುಂಬು ತೋಳಿನ ಶರ್ಟ್ ಹಾಗೂ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಪ್ರವೇಶ ಪತ್ರದ ಜತೆ ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್ ಪಾಸ್, ಡ್ರೈವಿಂಗ್ ಲೈಸನ್ಸ್, ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್) ತರಬೇಕಿದೆ. ಮೇ 23ರಿಂದ ಜೂ.3ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿವೆ.