ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಕಾರ್ಯಕ್ರಮ, ವಿದ್ಯಾರ್ಥಿಗಳ ಪ್ರತಿಭಾ ದಿನ, ಕಾಲೇಜು ವಾರ್ಷಿಕೋತ್ಸವ ವಿಬ್‌ಜಯಾರ್-2023 (VIBGYOR-2023), ಹಿರಿಯ ವಿದ್ಯಾರ್ಥಿಗಳ ಸಹಮಿಲನ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಸಂಜೆ ರಿದಂ ಕಾರ್ಯಕ್ರಮಗಳು ಮೇ 25, 26 ಹಾಗೂ 27ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ಮೇ.25ರಂದು ಬೆಳಗ್ಗಿನಿಂದ ವಿದ್ಯಾರ್ಥಿಗಳ ವರ್ಷವಾರು ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ಸಂಜೆ 3ಗಂಟೆಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದ್ದು, ತೆಂಕಿಲ ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶಾನುಭೋಗ್ ಮುಖ್ಯ ಅತಿಥಿಗಳಾಗಿರುತ್ತಾರೆ. ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ಸಾಹಿತ್ಯಿಕ, ಸಾಂಸ್ಕೃತಿಕ ವಿಭಾಗಗಳಲ್ಲಿ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಸಂಜೆ 7 ಗಂಟೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಬೀಳ್ಕೊಡುವ ಸಮಾರಂಭವು ನಡೆಯಲಿದೆ. ಉಪ್ಪಿನಂಗಡಿಯ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಕೆ.ಪ್ರಕಾಶ್ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ. ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ.
ಮೇ.26ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಕೆ.ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ನಿರ್ದೇಶಕರು, ಪ್ರಾಂಶುಪಾಲರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ಶೈಕ್ಷಣಿಕ ವರ್ಷದಲ್ಲಿ ಪ್ರತಿ ವಿಭಾಗದಲ್ಲಿಯೂ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಗೌರವಿಸಲಾಗುವುದು. ವಿವಿಧ ಧತ್ತಿ ನಿಧಿ ಪ್ರಶಸ್ತಿಗಳನ್ನು ಈ ಸಂದರ್ಭದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಕ್ರೀಡೆಯಲ್ಲಿ ವಿಶ್ವವಿದ್ಯಾನಿಲಯ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಶ್ರೇಷ್ಟ ಸಾಧನೆಯನ್ನು ಮಾಡಿದ ಪ್ರತಿಭಾವಂತ ಕ್ರೀಡಾಪಟುಗಳನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ.
ಮೇ.27ರಂದು ಅಪರಾಹ್ನ 3 ಗಂಟೆಗೆ ಹಿರಿಯ ವಿದ್ಯಾರ್ಥಿಗಳ ಸಹಮಿಲನ ಕಾರ್ಯಕ್ರಮವು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನರಸಿಂಹ ಪೈರವರ ಮುಂದಾಳುತ್ವದಲ್ಲಿ ನಡೆಯಲಿದೆ. ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಅಧ್ಯಕ್ಷತೆ ವಹಿಸುತ್ತಾರೆ. ಸಂಜೆ 7 ಗಂಟೆಯಿಂದ ಸಾಂಸ್ಕೃತಿಕ ಸಂಜೆ ರಿದಂ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾಂಶುಪಾಲ ಡಾ. ಮಹೇಶ್‌ಪ್ರಸನ್ನ ಕೆ. ತಿಳಿಸಿದ್ದಾರೆ.