ನೆಲ್ಯಾಡಿ: ಡಿ.ಕೆ.ಆರ್.ಡಿ.ಎಸ್. ಬೆಳ್ತಂಗಡಿ ಇದರ ನೇತೃತ್ವದಲ್ಲಿ, ಎನ್‌ಜಿ ವಲ್ಡ್ ಚ್ಯಾರಿಟೇಬಲ್ ಟ್ರಸ್ಟ್ ಕಾರಿತಾಸ್ ಇಂಡಿಯಾ ನವದೆಹಲಿ ಪ್ರಾಯೋಜಿತ ಸ್ಪರ್ಶ ಕಾರ್ಯಕ್ರಮ, ಗ್ರಾಮ ಪಂಚಾಯತ್ ನೆಲ್ಯಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ, ಕಿರಣ್ ಮಹಿಳಾ ತಾಲೂಕು ಒಕ್ಕೂಟ ಕಡಬ ಹಾಗೂ ಅಮೂಲ್ಯ ಮಹಾ ಸಂಘ ನೆಲ್ಯಾಡಿ ಇವುಗಳ ಆಶ್ರಯದಲ್ಲಿ ಕ್ಯಾನ್ಸರ್ ರೋಗದ ವಿರುದ್ಧ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ ಮೇ 25ರಂದು ನೆಲ್ಯಾಡಿ ಪೇಟೆಯಲ್ಲಿ ನಡೆಯಿತು.
ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್‌ನ ಧರ್ಮಗುರು ಫಾ. ಮ್ಯಾಥ್ಯೂ ವೆಟ್ಟಂತ್ತಡತ್ತಿಲ್‌ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ಯಾನ್ಸರ್ ರೋಗವನ್ನು ಪ್ರಥಮ ಹಂತದಲ್ಲಿಯೇ ಪತ್ತೆ ಮಾಡಿ, ಸೂಕ್ತ ಚಿಕಿತ್ಸೆ ನೀಡಿದಲ್ಲಿ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ. ದೃಢ ಮನಸ್ಸು ಹಾಗೂ ಆತ್ಮವಿಶ್ವಾಸ ಇದ್ದರೆ ಕ್ಯಾನ್ಸರ್ ರೋಗವನ್ನು ಗೆಲ್ಲಬಹುದು. ಕ್ಯಾನ್ಸರ್ ರೋಗಿಗಳಿಗೆ ಸರ್ಕಾರದಿಂದ ವಿಶೇಷ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು. ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಪ್ರಜ್ವಲ್‌ರವರು ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ನೀಡಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ಫಾ. ಬಿನೋಯಿ ಎ.ಜೆ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಮೂಲಕ ನಡೆಸಲ್ಪಡುವ ‘ಸ್ಪರ್ಶ’ ಕ್ಯಾನ್ಸರ್ ರೋಗದ ವಿರುದ್ಧದ ಅಭಿಯಾನದ ಕುರಿತು ವಿವರಿಸಿದರು.
ನೆಲ್ಯಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುಳ ಎನ್., ಅಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚಿನ ಸಹಾಯಕ ಧರ್ಮಗುರು ಫಾ.ಬಿಪಿನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸ್ಪರ್ಶ ಕಾರ್ಯಕ್ರಮದ ಸಂಯೋಜಕ ಸುನಿಲ್ ಗೊನ್ಸಾಲ್ವಿಸ್ ಸ್ವಾಗತಿಸಿ, ಕಿರಣ್ ಮಹಿಳಾ ತಾಲೂಕು ಒಕ್ಕೂಟ ಕಡಬ ಇದರ ಅಧ್ಯಕ್ಷೆ ಉಷಾ ಜೋಯಿ ವಂದಿಸಿದರು. ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜಾ ಅವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕರ್ತೆ ತೇಜಾವತಿ ಸಹಕರಿಸಿದರು.
ಕರಪತ್ರ ವಿತರಣೆ:
ಸಭಾ ಕಾರ್ಯಕ್ರಮದ ಬಳಿಕ ನೆಲ್ಯಾಡಿ ಪೇಟೆಯಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಮೈಕ್ ಉದ್ಘೋಷಣೆ ಮಾಡಿ ಸಾರ್ವಜನಿಕರಿಗೆ ಕರಪತ್ರ ವಿತರಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್ ರೋಗ ಪೀಡಿತ ವ್ಯಕ್ತಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಹಾಗೂ ವರ್ತಕರಿಂದ ಧನಸಹಾಯ ಸಂಗ್ರಹಣೆ ಮಾಡಲಾಯಿತು. ಕಿರಣ್ ಮಹಿಳಾ ತಾಲೂಕು ಒಕ್ಕೂಟ ಕಡಬ, ಅಮೂಲ್ಯ ಮಹಾಸಂಘ ನೆಲ್ಯಾಡಿ, ಆಶಾ ಕಾರ್ಯಕರ್ತೆಯರು, ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯವಿಭಾಗದ ವಿದ್ಯಾರ್ಥಿಗಳು ಹಾಗೂ ಕೇರಳದ ರಾಜಗಿರಿ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.