ಪುತ್ತೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ `ಶಕ್ತಿ ಯೋಜನೆ’ಗೆ ಜೂ.11ರಂದು ಪುತ್ತೂರು ಕೋಟಿ-ಚೆನ್ನಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.
ದೀಪ ಬೆಳಗಿಸಿ, ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೆಟ್ ವಿತರಿಸುವ ಮೂಲಕ ಶಾಸಕ ಅಶೋಕ್ ಕುಮಾರ್ ರೈ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಬಳಿಕ ಬಸ್ನಲ್ಲಿ ನಗರದಾದ್ಯಂತ ಬಸ್ನಲ್ಲಿ ಪ್ರಯಾಣಿಸಿದರು.
ಚಾಲನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈಯವರು ಮಾತನಾಡಿ, ಮಹಿಳೆಯರಿಗೆ ಸಾರಿಗೆ ಬಸ್ಗಳಲ್ಲಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸುವ ಯೋಜನೆಯು ಐತಿಹಾಸಿಕ ಕಾರ್ಯಕ್ರಮವಾಗಿದೆ. ಏಕ ಕಾಲದಲ್ಲಿ ರಾಜ್ಯದಾದ್ಯಂತ ಚಾಲನೆ ನೀಡಲಾಗುತ್ತಿದೆ. ಇಂತಹ ಯೋಜನೆಯನ್ನು ಈ ತನಕ ಯಾವ ಸರಕಾರವೂ ಮಾಡಿಲ್ಲ. ಈ ಯೋಜನೆಯಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳು ಸೇರಿದಂತೆ ಮಹಿಳೆಯರು ಕರ್ನಾಟಕ ರಾಜ್ಯ ಎಲ್ಲಾ ಕಡೆಗಳಿಗೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಸರಕಾರ ಐದು ಗ್ಯಾರಂಟಿಗಳನ್ನು ನೀಡಿದ್ದು ಎಲ್ಲಾ ಯೋಜನೆಗಳಿಗೂ ಅನುಮೋದನೆ ದೊರೆತಿದೆ. ಇದರ ಬಗ್ಗೆ ಮನೆ ಮನೆಯಲ್ಲಿ ಪ್ರಚಾರ ಮಾಡಿ ಎಲ್ಲಾ ಮಹಿಳೆಯರೂ ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು.
ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ಸರಕಾರ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತಂದಿದೆ. ಇದನ್ನು ಬಹಳಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕೆಲಸವನ್ನು ಕೆಎಸ್ಆರ್ಟಿಸಿಯವರು ಮಾಡಿದ್ದಾರೆ. ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಅವರು ತಿಳಿಸಿದರು.
ತಹಶೀಲ್ದಾರ್ ಶಿವಶಂಕರ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ., ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪದ್ಮಾವತಿ ಮತ್ತು ಬಳಗದವರು ಪ್ರಾರ್ಥಿಸಿದರು. ಘಟಕ ವ್ಯವಸ್ಥಾಪಕ ಇಸ್ಮಾಯಿಲ್ ಸ್ವಾಗತಿಸಿದರು. ಸಂಚಾರ ನಿಯಂತ್ರಕರಾದ ಅಬ್ಬಾಸ್ ಹಾಗೂ ವೆಂಕಟಕೃಷ್ಣ ಭಟ್ ಕಾರ್ಯಕ್ರಮ ನಿರೂಪಿಸಿ, ವಿಭಾಗೀಯ ಅಂಕಿ ಅಂಶ ಅಧಿಕಾರಿ ಹರೀಶ್ ಕೊಟ್ಟಾರಿ ವಂದಿಸಿದರು.