‘ಗೃಹ ಲಕ್ಷ್ಮಿ’ ಅರ್ಜಿಗಳಿಗೆ ಮಂಜೂರಾತಿ ಸಿಡಿಪಿಒಗೆ ಹೊಣೆ: ಸರಕಾರ ಆದೇಶ

0

ಬೆಂಗಳೂರು: ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ನೀಡುವ ‘ಗೃಹ ಲಕ್ಷ್ಮಿ’ ಯೋಜನೆಯ ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿ ನೀಡಲು ಸಂಬಂಧಪಟ್ಟ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ‘ಮಂಜೂರಾತಿ ಪ್ರಾಧಿಕಾರ’ವೆಂದು ಪರಿಗಣಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಗೃಹ ಲಕ್ಷ್ಮಿ ಯೋಜನೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ, ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ. ಈ ಯೋಜನೆಯ ಫಲಾನುಭವಿಗಳು ಜೂ.25 ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಬೇಕು. ನಂತರ ಜುಲೈ 15ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುವುದು.

ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಇಲ್ಲವೇ ಭೌತಿಕವಾಗಿಯೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡಲಾಗುವುದು. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡಿ, ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡು ಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡುವುದು ಮತ್ತು ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್‌ಗಳನ್ನು ಜೋಡಣೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here