ಬೆಂಗಳೂರು: ಬಿಪರ್ ಜಾಯ್ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ, ಗುಡುಗು, ಮಿಂಚಿನ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮಲೆನಾಡು ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಿದ್ದು ಪ್ರವಾಸಿಗರು, ಮಕ್ಕಳು, ಸ್ಥಳೀಯರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಸಮುದ್ರದ ಸಮೀಪ ಹೋಗುವುದನ್ನೂ ನಿಷೇಧಿಸಲಾಗಿದೆ. ಭಾರೀ ಅಲೆಗಳು ಏಳುವ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಕೂಡ ಮುಂದಿನ 5 ದಿನಗಳ ಕಾಲ ಸಂಜೆ ವೇಳೆ ಉತ್ತಮ ಮಳೆ ಬೀಳುವ ಮುನ್ಸೂಚನೆ ನೀಡಿದೆ.