ನೆಲ್ಯಾಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತಕ್ಕೊಳಪಟ್ಟ ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆಯಲ್ಲಿ ಪ್ರತಿಭಾ ಶೋಧ ಕಾರ್ಯಕ್ರಮ ನಡೆಯಿತು.
ಶಾಲೆಯ ಪೂರ್ವ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಮುರಳಿಕೃಷ್ಣರವರು ಕಾರ್ಯಕ್ರಮ ಉದ್ಘಾಟಿಸಿ, ತನ್ನ ಬಾಲ್ಯದ ದಿನಗಳನ್ನು ನೆನಪಿಸಿಕೊಂಡು ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಬಳಸಿಕೊಳ್ಳಿ ಎಂದು ಹೇಳಿ ಶುಭ ಹಾರೈಸಿದರು. ಪ್ರೌಢಶಾಲಾ ಮುಖ್ಯಗುರು ರಮೇಶ್ ಮಯ್ಯ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಾಲಾ ಮುಖ್ಯಗುರು ಲಕ್ಷ್ಮಣ ಗೌಡ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸುವ ಸಲುವಾಗಿ ಶಾಲಾ ಮುಖ್ಯಗುರು ರಮೇಶ್ ಮಯ್ಯರವರು ಪ್ರತಿಭಾಶೋಧ ಕಾರ್ಯಕ್ರಮ ಆಯೋಜಿಸಿದ್ದರು. ಪ್ರತಿಭಾ ಕಾರಂಜಿಯಲ್ಲಿರುವ ಎಲ್ಲಾ ಸ್ಪರ್ಧೆಗಳನ್ನು ಮಕ್ಕಳ ಪೂರ್ವ ತಯಾರಿಯೊಂದಿಗೆ ನಡೆಸಲಾಯಿತು. ನೃತ್ಯ ಶಿಕ್ಷಕಿ, ಶಾಲಾ ಶಿಕ್ಷಕ ವೃಂದದವರು ಹಾಗೂ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾ ಅಭಿಮಾನಿ ಎ.ಎನ್.ಕೊಳಂಬೆರವರು ತೀರ್ಪುಗಾರರಾಗಿ ಸಹಕರಿಸಿದರು.
ಸಮಾರೋಪ:
ಸ್ಪರ್ಧೆಯ ಬಳಿಕ ನಡೆದ ಸಮಾರೋಪ ಸಮಾರಂಭವು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್.ರವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದ ಲೋಕೇಶ್ ಎಸ್.ಆರ್.ಅವರು, ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಅವಕಾಶ ನೀಡುತ್ತಿರುವಂತಹ ಶಾಲೆಯ ಬಗ್ಗೆ ಅಭಿಮಾನ ವ್ಯಕ್ತಪಡಿಸಿ ಅಭಿನಂದಿಸಿ ಶುಭ ಹಾರೈಸಿದರು. ಕಡಬ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಮಲ್ ಶುಭಹಾರೈಸಿದರು. ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು. ನಂತರ ಕ್ಷೇತ್ರ ಶಿಕ್ಷಣಾಧಿಕಾರಿಯವರು ಶಿಕ್ಷಕರಿಗೆ ಶೈಕ್ಷಣಿಕ ಮಾರ್ಗದರ್ಶನ ನೀಡಿದರು.