ಇಂದಿನಿಂದ ವಿಧಾನಸಭೆ ಅಧಿವೇಶನ – ವಾಕ್ಸಮರಕ್ಕೆ ವೇದಿಕೆ ಸಜ್ಜು – ವಿವಾದಿತ ವಿಧೇಯಕಗಳು ವಾಪಸ್

0

ಪುತ್ತೂರು/ಮಂಗಳೂರು :ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನೂತನ ಸರಕಾರ ರಚನೆಯಾದ ಬಳಿಕ ನಡೆಯಲಿರುವ ಮೊದಲ ಬಜೆಟ್ ಅಧಿವೇಶನವು ಇಂದಿನಿಂದ ಆರಂಭಗೊಳ್ಳುತ್ತಿದ್ದು ಆಡಳಿತ ಹಾಗೂ ಪ್ರತಿಪಕ್ಷಗಳ ನಡುವಿನ ವಾಕ್ ಸಮರಕ್ಕೆ ವೇದಿಕೆ ಸಿದ್ಧಗೊಂಡಿದೆ.ಇಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲ ತಾವರ್ ಚಂದ್ ಗೆಹಲೊಟ್
ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಚರ್ಚೆ ನಡೆಯಲಿದೆ. ಜುಲೈ.7ರಂದು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಜೆಟ್ ಅಧಿವೇಶನದಲ್ಲಿ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ವಿವಾದಿತ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ – 2022, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿಧೇಯಕವನ್ನು, ಭೂ ಸುಧಾರಣೆ ತಿದ್ದುಪಡಿ ವಿಧೇಯಕವನ್ನು ಕಾಂಗ್ರೆಸ್ ಸರಕಾರ ಹಿಂದೆ ಪಡೆಯುವ ಸಾಧ್ಯತೆ ಇದೆ. ಅಲ್ಲದೆ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ವಿಧೇಯಕ, ಕರ್ನಾಟಕ ಅಗ್ನಿಶಾಮಕ ಮತ್ತು ಸುರಕ್ಷತಾ ವಿಧೇಯಕ, ಹಾಗೂ ಸರಕಾರಿ ವ್ಯಾಜ್ಯಗಳ ನಿರ್ವಹಣೆ ವಿಧೇಯಕವನ್ನು ಸರಕಾರ ಮಂಡನೆ ಮಾಡಲಿದೆ ಎಂದು ತಿಳಿದು ಬಂದಿದೆ. ಹತ್ತು ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಎಂಟು ದಿನ ಪ್ರಶ್ನೋತ್ತರ ಕಲಾಪಕ್ಕೆ ಅವಕಾಶ ನೀಡಲಾಗಿದೆ. ಜುಲಾಯಿ ಮೂರರಂದು ರಾಜ್ಯಪಾಲರ ಭಾಷಣ ಹಾಗೂ ಜುಲೈ 7ರಂದು ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಪ್ರಶ್ನೋತ್ತರ ಕಲಾಪ ಇರುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿಗಳ ಅನುಷ್ಠಾನದ ವಿಚಾರದಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಮಾತಿನ ಸಮರ ನಡೆಯುವ ಸಾಧ್ಯತೆ ಇದೆ. ಗ್ಯಾರೆಂಟಿಗಳ ಅನುಷ್ಠಾನಕ್ಕೆ ಶರತ್ತುಗಳನ್ನು ವಿಧಿಸುತ್ತಿರುವ ಸರಕಾರದ ನಿಲುವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡಲಿದೆ. ಸರಕಾರದ ವಿರುದ್ಧ ಹೋರಾಟ ಮಾಡಲು ಹುಮ್ಮಸ್ಸಿನಲ್ಲಿರುವ ಪ್ರತಿಪಕ್ಷ ಬಿಜೆಪಿ ತಂತ್ರಕ್ಕೆ ಪ್ರತಿ ತಂತ್ರ ಹೆಣೆಯಲು ಮುಂದಾಗಿರುವ ಸರಕಾರವು, ಹಿಂದಿನ ಸರಕಾರದ ಅವಧಿಯಲ್ಲಿ ನಡೆದಿರುವ ಅವ್ಯವಹಾರ, ಭ್ರಷ್ಟಾಚಾರದ ಆರೋಪಗಳ ಕುರಿತು ತನಿಖೆಗೆ ವಹಿಸುವ ಮೂಲಕ ಪ್ರತಿಪಕ್ಷಗಳಿಗೆ ತಿರುಗೇಟು ನೀಡಲು ಮುಂದಾಗಿದೆ.

LEAVE A REPLY

Please enter your comment!
Please enter your name here