ಶಕ್ತಿ ಯೋಜನೆಗೆ ಸಿಕ್ಕಿರುವ ಜನಮನ್ನಣೆಗೆ ಡಾ| ಹೆಗ್ಗಡೆಯವರಿಂದ ಮೆಚ್ಚುಗೆ-ಮುಖ್ಯಮಂತ್ರಿ ಧನ್ಯವಾದ
ಡಾ|ಡಿ.ವೀರೇಂದ್ರ ಹೆಗ್ಗಡೆಯವರ ಪತ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಧನ್ಯವಾದ ಸೂಚಿಸಿದ್ದಾರೆ.ಸಿದ್ಧರಾಮಯ್ಯ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ
ಶ್ರೀ ಡಿ.ವೀರೇಂದ್ರ ಹೆಗ್ಗಡೆಯವರು ನಾನು ಮಂಡಿಸಿದ 14ನೇ ಬಜೆಟ್‌ನ ಫಲಶೃತಿಯನ್ನು ಶ್ಲಾಘಿಸಿ ಹಾಗೂ ನಮ್ಮ ಸರಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿ ಬರೆದಿರುವ ಪತ್ರಕ್ಕೆ ಧನ್ಯವಾದಗಳು ಎಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಪುತ್ತೂರು: ರಾಜ್ಯದಲ್ಲಿ 14ನೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಽಕಾರಿ, ರಾಜ್ಯ ಸಭಾ ಸದಸ್ಯರೂ ಆಗಿರುವ ಡಾ|ಡಿ.ವೀರೇಂದ್ರ ಹೆಗ್ಗಡೆಯವರು ಅಭಿನಂದಿಸಿದ್ದು ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮ ನೀಡಿದ್ದೀರಿ ಎಂದು ಮೆಚ್ಚುಗೆ ಸೂಚಿಸಿ ಪತ್ರ ಬರೆದಿದ್ದು ಮುಖ್ಯಮಂತ್ರಿಯವರು ಇದಕ್ಕೆ ಧನ್ಯವಾದ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವ ಡಾ|ಡಿ.ವೀರೇಂದ್ರ ಹೆಗ್ಗಡೆಯವರು,ರಾಜ್ಯದಲ್ಲಿ 14ನೇ ಬಜೆಟ್ ಮಂಡಿಸಿದ ನಿಮಗೆ ಅಭಿನಂದನೆಗಳು.ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮ ನೀಡಿದ್ದೀರಿ.ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು, ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ.ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ.ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ.ಎಲ್ಲರ ಪರವಾಗಿ ಅಭಿನಂದನೆಗಳು.ಅವಕಾಶ ಇದ್ಧಾಗ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಬೇಕಾಗಿ ಅಪೇಕ್ಷೆ.ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಹಾರೈಸಿದ್ದರು.
ರಾಜ್ಯ ಸರಕಾರದ ಗ್ಯಾರಂಟಿಗಳಲ್ಲಿ ಒಂದಾದ, ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ರಾಜ್ಯದೆಲ್ಲೆಡೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಮಹಿಳೆಯರು ಈ ಯೋಜನೆಯನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ.ಈ ಯೋಜನೆ ಜಾರಿಗೆ ಬಂದ ಬಳಿಕ ಧರ್ಮಸ್ಥಳ, ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಷೇತ್ರ ಸೇರಿದಂತೆ ಧಾರ್ಮಿಕ ಪುಣ್ಯ ಕ್ಷೇತ್ರಗಳಿಗೆ ಬರುವ ಮಹಿಳೆಯರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ.