ಪುತ್ತೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುವುದರಿಂದ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗಳಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಪೋನ್‌ಗಳನ್ನು ಸ್ವಿಚ್ ಆಫ್ ಮಾಡಿ ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ. ಈ ಬಗ್ಗೆ ದೇವಾಲಯಗಳ ಸೂಚನಾ ಫಲಕಗಳಲ್ಲಿ ಅಗತ್ಯ ಸೂಚನೆಗಳನ್ನು ಪ್ರಕಟಿಸುವಂತೆ ಸೂಚಿಸಲಾಗಿದೆ.